ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 2025-26ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ, ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭ ನಡೆಯಿತು.

ಗದಗ: ಸರ್ಕಾರದ ಯೋಜನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ತರುವಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಸಹಯೋಗದಲ್ಲಿ 2025-26ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ, ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನೌಕರರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಸರಿಯಾಗಿ ಕಚೇರಿ ಕೆಲಸ ನಿರ್ವಹಿಸಲು ಅವರಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಆರೋಗ್ಯವೇ ಭಾಗ್ಯವಾಗಿದೆ. ಸರ್ಕಾರಿ ನೌಕರರ ಇಡೀ ಕುಟುಂಬವು ಅವರ ಮೇಲೆ ಅವಲಂಬಿತವಾಗಿರುತ್ತದೆ. ಒಂದು ವೇಳೆ ಕಚೇರಿ ಕೆಲಸದ ಅತಿಯಾದ ಒತ್ತಡದಿಂದ ನೌಕರರಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಅವರ ಕುಟುಂಬವು ಸಂಕಷ್ಟಕ್ಕೆ ಒಳಗಾಗುತ್ತದೆ. ಈ ನಿಟ್ಟಿನಲ್ಲಿ ಅವರು ಕೆಲಸದ ಒತ್ತಡದಿಂದ ಹೊರಬಂದು ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಕನಿಷ್ಠ 1 ತಾಸು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಅಥವಾ ಯೋಗ, ಧ್ಯಾನ, ವಾಕಿಂಗ್, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಂಡು ಒತ್ತಡ ಮುಕ್ತ ವಾತಾವರಣ ನಿರ್ಮಿಸಿಕೊಳ್ಳಬೇಕು. ನೌಕರರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಕ್ರೀಡಾ ಮನೋಭಾವ ಬೆಳೆಯುತ್ತದೆ. ಜಿಲ್ಲೆಯ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸರ್ಕಾರದ ಧ್ಯೇಯೋದ್ದೇಶಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರು ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಈ ಕ್ರೀಡಾ ಉತ್ಸವವು ಒಂದು ಸಂತಸದ ಅವಕಾಶವನ್ನು ಕೊಟ್ಟಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೂ ಸಹಿತ ನೌಕರರಿಗೆ ಮಾನಸಿಕ ಸದೃಢತೆ ತಂದುಕೊಡುತ್ತವೆ. ನಿರ್ಣಾಯಕರ ನಿರ್ಣಯಗಳಿಗೆ ಬದ್ಧರಾಗಿ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗದಗ ಜಿಲ್ಲೆಗೆ ಹೆಸರು ತರಬೇಕು ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮುಖಾಂತರ ದೈಹಿಕ ಹಾಗೂ ಮಾನಸಿಕ ಸದೃಢತೆ ಹೊಂದಬೇಕು. ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಬಸವರಾಜ ವೆಂ. ಬಳ್ಳಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ನಿರ್ಮಿಸಲಾದ ಮಳಿಗೆಗಳನ್ನು ಉದ್ಘಾಟಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸ್.ಎನ್. ಬಳ್ಳಾರಿ, ರಾಜು ಕುರಡಗಿ, ಪ್ರೇಮನಾಥ ಗರಗ, ರವಿ ಗುಂಜೀಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಗೌರವಾಧ್ಯಕ್ಷ ಡಿ.ಎಸ್. ತಳವಾರ ಇದ್ದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು. ಎಂ.ಎಸ್. ಕುಚಬಾಳ ವಂದಿಸಿದರು.