ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕ ಹಂಪನಗೌಡ ಬಾದರ್ಲಿ

| Published : Oct 27 2024, 02:04 AM IST

ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕ ಹಂಪನಗೌಡ ಬಾದರ್ಲಿ
Share this Article
  • FB
  • TW
  • Linkdin
  • Email

ಸಾರಾಂಶ

ಮಸ್ಕಿಯಲ್ಲಿ ನಡೆದ ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮಾವೇಶಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ, ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಹಂಪನಗೌಡ ಬಾದರ್ಲಿ ಹೇಳಿದರು. ಮಸ್ಕಿ ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಶನಿವಾರ ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಏರ್ಪಡಿಸಿದ್ದ ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಗಳೊಂದಿಗೆ ಈಗಾಗಲೇ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಬದಲಾವಣೆ ಮಾಡಿಕೊಳ್ಳುವ ಕಾಲ ಬಂದಿದೆ. ಜಿಲ್ಲಾ ಒಕ್ಕೂಟದಿಂದ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಬದಲಾವಣೆ ಕ್ರಾಂತಿ ಆರಂಭವಾಗಿದೆ ಎಂದರು.

ಒಕ್ಕೂಟದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಸ್ಕಿ ನಾಗರಾಜ ವಕೀಲ ಮಾತನಾಡಿ, ಜಿಲ್ಲೆಯಲ್ಲಿ ಎರಡುನೂರಕ್ಕೂ ಹೆಚ್ಚು ಆಡಳಿತ ಮಂಡಳಿಗಳು ಸಂಘಟನೆಯಲ್ಲಿ ಇವೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಷ್ಟು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದಾರೋ ಅಷ್ಟೇ ಸಂಖ್ಯೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಾರೆ ಎಂದರಲ್ಲದೆ, ಪಟ್ಟಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳ ತೆರಿಗೆ ವಿನಾಯಿತಿ ನೀಡಬೇಕು ಒತ್ತಾಯಿಸಿದರು. ಒಕ್ಕೂಟದ ಗೌರವಾಧ್ಯಕ್ಷ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳು ನೂರಾರು, ಗ್ರಾಮೀಣ ಭಾಗದ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಲಿ ಎಂದರು.

ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ: ಜಿಲ್ಲೆಯ ವಿವಿಧ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 200 ಶಿಕ್ಷಕರಿಗೆ ಜಿಲ್ಲಾ ಒಕ್ಕೂಟದಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಎಸ್‌. ಎಲ್., ಕೇಶವರಡ್ಡಿ, ಆರ್‌.ಸಿ.ಪಾಟೀಲ, ಶಾಂತನಗೌಡ, ಪ್ರಕಾಶ ಮಾಲಿ ಪಾಟೀಲ, ಬಿ.ಬಸವರಾಜ, ಶಾಬುದ್ದೀನ ಪೋತ್ನಾಳ, ತಮಾಸ್ ಬೆಂಜಮಿನ್, ತರೂರ್ ಬಸವರಾಜ ಪಾಟೀಲ, ನರೇಂದ್ರ ನಾಥ, ವೈ.ಟಿ.ಬಸವರಾಜ, ಮಂಜುನಾಥ ಸ್ವಾಮಿ, ಶಂಕರಲಿಂಗಯ್ಯ ದೇವದುರ್ಗ, ರವಿ ಕುಮಾರ ಸೇರಿದಂತೆ ಜಿಲ್ಲೆಯ ವಿವಿಧ ಖಾಸಗಿ ಶಾಲಾ ಶಿಕ್ಷಕರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ಮಸ್ಕಿ ತಾಲೂಕು ಘಟಕದ ಅಧ್ಯಕ್ಷ ಶಿವುಕುಮಾರ್ ಎನ್. ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.