ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಬೀರಪ್ಪ ಅಂಡಗಿ

| Published : Mar 31 2024, 02:07 AM IST

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಬೀರಪ್ಪ ಅಂಡಗಿ
Share this Article
  • FB
  • TW
  • Linkdin
  • Email

ಸಾರಾಂಶ

ಮಗುವಿನ ಸರ್ವಾಂಗೀಣ ಬೆಳವಣಿಗೆ ಜೊತೆಯಲ್ಲಿ ಗುಣಾತ್ಮಕ ಶಿಕ್ಷಣ ಸಿಗಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಮಗುವಿನ ಸರ್ವಾಂಗೀಣ ಬೆಳವಣಿಗೆ ಜೊತೆಯಲ್ಲಿ ಗುಣಾತ್ಮಕ ಶಿಕ್ಷಣ ಸಿಗಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಹೇಳಿದರು.

ತಾಲೂಕಿನ ಬೆಳವಿನಾಳ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ವಿಜಯಾ ಹಿರೇಮಠರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಂದು ಮಗು ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ಪಡೆಯಬೇಕಾದರೆ ಪ್ರಾಥಮಿಕ ಹಂತದಲ್ಲಿ ನೀಡುವ ಶಿಕ್ಷಣ ಬಹಳ ಮಹತ್ವದ ಹಂತವಾಗಿದೆ. ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಆ ವಿದ್ಯಾರ್ಥಿಯು ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸಾಧ್ಯ. ಇಂತಹ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಮುಖದಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ಬೋಧನೆಗಿಂತ ಇತರ ಕಾರ್ಯಗಳಲ್ಲಿ ಶಿಕ್ಷಕರನ್ನು ಹೆಚ್ಚು ಬಳಸುವುದರಿಂದ ಪಾಠ ಮಾಡಲು ಹೆಚ್ಚು ಸಮಯ ಮೀಸಲಿಡಲು ಸಾಧ್ಯವಾಗುತ್ತಿಲ್ಲ. ಇಂತಹ ಅನೇಕ ಕಾರ್ಯಗಳಿಂದ ಶಿಕ್ಷಕರಿಗೆ ಸರ್ಕಾರವು ಮುಕ್ತಿ ಕೊಡಿಸಿ ಮಗುವಿನ ಶೈಕ್ಷಣಿಕ ಪ್ರಗತಿಯ ಬಗ್ಗೆ ಹೆಚ್ಚು ತೊಡಗಿಸಿಕೊಳ್ಳವ ಹಾಗೇ ಮಾಡಬೇಕು ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಶಿವಪ್ಪ ಜೋಗಿ ಮಾತನಾಡಿ, ಸರ್ಕಾರಿ ನೌಕರರನಾಗಿ ಕಾರ್ಯನಿರ್ವಹಿಸುವ ಸಮಯದಲ್ಲಿ ನೇಮಕಾತಿ ಹಾಗೂ ನಿವೃತ್ತಿಯು ಸಹಜ ಕಾರ್ಯವಾಗಿದೆ. ಆದರೆ ನೇಮಕಾತಿಯಿಂದ ನಿವೃತ್ತಿಯ ಸಮಯದ ನಡುವಿನಲ್ಲಿ ಮಾಡಿದ ಉತ್ತಮ ಕಾರ್ಯಗಳು ಮಾತ್ರ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತವೆ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ತಾಲೂಕು ಅಧ್ಯಕ್ಷ ಪ್ರಾಣೇಶ ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹೊಳಿಬಸಯ್ಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ವಿರುಪಾಕ್ಷಪ್ಪ ಬಾಗೋಡಿ, ಶಿಕ್ಷಕರಾದ ದೇವರಡ್ಡಿ, ವಿಜಯಾ ಹಿರೇಮಠ, ಭಾರತಿ ಆಡೂರು, ಶರಣಯ್ಯಾ, ಸಾವಿತ್ರಿ ಮುಂತಾದವರಿದ್ದರು. ಶಿಕ್ಷಕ ನಾಗಪ್ಪ ನರಿ ಕಾರ್ಯಕ್ರಮ ನಿರೂಪಿಸಿದರು.