ಎಸ್‌ಐಆರ್ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಸುಮಾರು ೧.೬೦ ಲಕ್ಷ ಮೃತಪಟ್ಟವರು ಹಾಗೂ ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದೀಗ ಹೊಸ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ, ಅದರಲ್ಲೂ ಯುವ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ೧೮ ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕ-ಯುವತಿಯೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರಸಭೆ ಆವರಣದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಯಂಗ್ ಗಣೇಶ’ ವಿನೂತನ ಪರಿಕಲ್ಪನೆಯಡಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಸಾಂಕೇತಿಕವಾಗಿ ಚುನಾವಣಾ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಸುಮಾರು ೧.೬೦ ಲಕ್ಷ ಮೃತಪಟ್ಟವರು ಹಾಗೂ ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದೀಗ ಹೊಸ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ. ಅರ್ಹರಾದ ಯಾವುದೇ ಯುವ ಮತದಾರರು ನೋಂದಣಿಯಿಂದ ಹೊರಗುಳಿಯದಂತೆ ಕ್ರಮ ವಹಿಸುವುದು. ಆರೋಗ್ಯಕರ ಮತ್ತು ಶುದ್ಧ ಮತದಾರರ ಪಟ್ಟಿಯನ್ನು ರೂಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದು ಪ್ರತಿಯೊಬ್ಬರ ಕರ್ತವ್ಯ. ಮಣ್ಣಿನ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ಮೂರ್ತಿಗಳ ಬಳಕೆಯನ್ನು ತ್ಯಜಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯ ಸ್ವೀಪ್ ಚಟುವಟಿಕೆಗಳು ಕೇವಲ ಸಾಂಪ್ರದಾಯಿಕವಾಗಿರದೆ ಯುವ ಮತದಾರರನ್ನು ನೇರವಾಗಿ ತಲುಪುವಂತಿರಬೇಕು ಎಂಬ ಉದ್ದೇಶದಿಂದ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಇತ್ತೀಚೆಗೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ೧೮ ವರ್ಷ ಮೇಲ್ಪಟ್ಟ ಅರ್ಹ ಯುವ ಮತದಾರರನ್ನು ಒಳಗೊಂಡು ಹಾಡುಗಾರಿಕೆ ಸ್ಪರ್ಧೆ ಆಯೋಜಿಸಲಾಗಿತ್ತು. ಇದರಲ್ಲಿ ವಿಶೇಷಚೇತನ ವಿದ್ಯಾರ್ಥಿಯೊಬ್ಬರು ಎಸ್‌ಐಆರ್ ಪ್ರಕ್ರಿಯೆ ಕುರಿತು ಸ್ವತಃ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿ, ಗೆಳೆಯರೊಂದಿಗೆ ಹಾಡು ಪ್ರಸ್ತುತಪಡಿಸಿದ್ದರು. ಆ ಹಾಡನ್ನು ಜಿಲ್ಲಾ ಸ್ವೀಪ್ ಜಾಗೃತಿ ಗೀತೆಯಾಗಿ ಅಳವಡಿಸಿಕೊಳ್ಳಲಾಗಿದೆ ಎಂದರು.

ಇದೀಗ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ನಗರಸಭೆಯ ಸಹಯೋಗದೊಂದಿಗೆ ಸ್ವೀಪ್ ಗೌರಿ’ ಹಾಗೂ ಯುವ ಮತದಾರ ಗಣೇಶ’ ಪರಿಕಲ್ಪನೆಯ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ನಗರದ ಮೂಲಕ ಸಂಚರಿಸುವ ಪ್ರತಿಯೊಬ್ಬ ಯುವ ಮತದಾರನ ಗಮನ ಸೆಳೆಯುವಂತೆ ಈ ಕಾರ್ಯಕ್ರಮ ರೂಪಿಸಲಾಗಿದೆ. ಗೌರಿ-ಗಣೇಶ ಮೂರ್ತಿಗಳನ್ನು ವೀಕ್ಷಿಸುವ ಸಂದರ್ಭದಲ್ಲಿ ನನ್ನ ಹಕ್ಕು, ನನ್ನ ಜವಾಬ್ದಾರಿ, ನನ್ನ ಮತ-ನಾನು ನೋಂದಾಯಿಸಿಕೊಳ್ಳುತ್ತೇನೆ’ ಎಂಬ ಸಂದೇಶ ಯುವಜನರ ಮನಸ್ಸಿನಲ್ಲಿ ಮೂಡಬೇಕು ಎಂಬುದೇ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಇದೇ ವೇಳೆ ಎಸ್‌ಐಆರ್-೨೦೨೬ ಕುರಿತು ಜಾಗೃತಿ ಮೂಡಿಸುವ ರಂಗೋಲಿ ಹಾಗೂ ವಿವಿಧ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಯು.ಪಿ.ಪಂಪಾಶ್ರೀ, ಪರಿಸರ ಅಭಿಯಂತರ ರುದ್ರೇಗೌಡ, ನಗರಸಭೆ ಅಧಿಕಾರಿಗಳು, ವಿದ್ಯಾರ್ಥಿಗಳು, ಯುವ ಮತದಾರರು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.