ಕನ್ನಡಪ್ರಭ ವಾರ್ತೆ ಕಲಬುರಗಿದೇಶದ ರಕ್ಷಣೆ ಮತ್ತು ಭದ್ರತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಬಲಿದಾನವ ಸ್ಮರಿಸಿ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹೇಳಿದರು.ನಗರದ ಡಿ.ಎ.ಆರ್. ಮೈದಾನದಲ್ಲಿ ಬುಧವಾರ ಕಲಬುರಗಿ ನಗರ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಅವರು ಮಾತನಾಡಿದರು.ಲಕ್ಷಾಂತರ ಜನರು ಸೇರುವ ಹಬ್ಬ, ಜಾತ್ರೆ ಹಾಗೂ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಲ್ಲಿ ಪೊಲೀಸರ ಶ್ರಮ ಮಹತ್ವದ್ದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಪ್ರಮುಖ ಜವಾಬ್ದಾರಿ. ಕೆಲವೊಮ್ಮೆ ಸಣ್ಣಪುಟ್ಟ ಘಟನೆಗಳು ನಡೆದರೂ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಪೊಲೀಸ್ ವೃತ್ತಿಯನ್ನು ಕೆಲವರು ಕೃತಜ್ಞತೆ ಸಿಗದ ಸೇವೆ ಎಂದೂ ಕರೆಯುತ್ತಾರೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಪ್ರತಿ ವರ್ಷದಂತೆ ಅ.21ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದ ಉತ್ತರ ಗಡಿಯ ಲಡಾಖ್‌ನಲ್ಲಿ 1959ರಲ್ಲಿ ತಮ್ಮ ಸಂಖ್ಯೆಗಿಂತ ಹಲವು ಪಟ್ಟು ಹೆಚ್ಚಿದ್ದ ಹಾಗೂ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಚೀನಾ ಸೈನಿಕರ ವಿರುದ್ಧ ಧೈರ್ಯದಿಂದ ಹೋರಾಡಿ ಪ್ರಾಣಾರ್ಪಣೆ ಮಾಡಿದ 10 ಮಂದಿ ಭಾರತೀಯ ಪೊಲೀಸ್ ಸಿಬ್ಬಂದಿಯ ಸ್ಮರಣಾರ್ಥ ಈ ದಿನ ಆಚರಿಸಲಾಗುತ್ತದೆ ಎಂದರು.154 ಹುತಾತ್ಮ ಪೊಲೀಸ್ ಸಿಬ್ಬಂದಿಯ ಹೆಸರುಗಳನ್ನು ಈ ಸಂದರ್ಭ ಸ್ಮರಿಸಲಾಯಿತು. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅಧ್ಯಕ್ಷತೆ ವಹಿಸಿದ್ದರು. ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಡಿಸಿಪಿ ಶಾಲೂ, ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ, ಎಸಿಪಿ ಪ್ರವೀಣ ನಾಯಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು. ಪೊಲೀಸ್ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಹುತಾತ್ಮ ಪೊಲೀಸರ ಗೌರವಾರ್ಥ ಮೂರು ಸುತ್ತು ಗುಂಡು ಹಾರಿಸಿ ಶಸ್ತ್ರ ಗೌರವ ಸಲ್ಲಿಸಲಾಯಿತು.