ಗೃಹ ರಕ್ಷಕ ದಳದವರ ಸೇವೆ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

| Published : Dec 19 2024, 12:31 AM IST

ಗೃಹ ರಕ್ಷಕ ದಳದವರ ಸೇವೆ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಇದೇ ಸಂದರ್ಭದಲ್ಲಿ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಧೀಕ್ಷಕ ರತ್ನಾಕರ ಎಂ. ವಿಜೇತರ ಹೆಸರುಗಳನ್ನು ವಾಚಿಸಿದರು. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ತುರ್ತು ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಪೊಲೀಸ್ ಇಲಾಖೆಯ ಜೊತೆಯಲ್ಲಿ ಆಂತರಿಕ ಭದ್ರತಾ ಕರ್ತವ್ಯಗಳನ್ನು ಗೃಹ ರಕ್ಷಕ ದಳದವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಶ್ಲಾಘಿಸಿದರು.

ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲೆಯ ಪ್ರವಾಸೋದ್ಯಮ ತಾಣಗಳಲ್ಲಿ ಗೃಹ ರಕ್ಷಕ ದಳದವರು ನಿಷ್ಠೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅಲ್ಲದೇ ಬೀಚ್‌ಗಳಲ್ಲಿಯೂ ಸಹ ಜೀವ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಯ ಕಡಲತೀರಗಳಲ್ಲಿ ಜೀವ ರಕ್ಷಕರಾಗಿ ಗೃಹ ರಕ್ಷಕದಳದವರನ್ನು ನಿಯೋಜಿಸಲಾಗುವುದು. ಇದಕ್ಕೆ ಈಜು ತರಬೇತಿಯನ್ನೂ ಸಹ ನೀಡಲಾಗುವುದು ಎಂದರು.ಗೃಹರಕ್ಷಕ ದಳದವರು ತಮ್ಮ ಕುಟುಂಬ ವರ್ಗದವರ ಜೊತೆ ಉತ್ತಮ ಬಾಂಧವ್ಯ ಹೊಂದಿ, ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಬೇಕು. ತಾವುಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆ, ತಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿ, ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಸಮಾದೇಷ್ಟ ಮುರಲೀ ಮೋಹನ್ ಚೂಂತಾರ್, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಸಮಾದೇಷ್ಟೆ ಸನೀಮ್ ತಾಜ್, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಸಮಾದೇಷ್ಟ ಡಾ. ಸಂಜು ಟಿ. ನಾಯಕ್ ಇದ್ದರು.ಇದೇ ಸಂದರ್ಭದಲ್ಲಿ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಧೀಕ್ಷಕ ರತ್ನಾಕರ ಎಂ. ವಿಜೇತರ ಹೆಸರುಗಳನ್ನು ವಾಚಿಸಿದರು. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಸ್ವಾಗತಿಸಿ, ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ನಿರೂಪಿಸಿ, ಸಹಾಯಕ ಬೋಧಕ ಕರಿಬಸಪ್ಪ ವಂದಿಸಿದರು.