ಶಾಲೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ತಮ್ಮ ಸ್ವಂತ ಮಕ್ಕಳಂತೆ ಕಾಣುವ ಮನೋಭಾವ ಹೊಂದಿದ್ದಾರೆ. ಪಠ್ಯಪುಸ್ತಕದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಶಿಕ್ಷಕರು ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಂದೆ-ತಾಯಿ ಮಕ್ಕಳಿಗೆ ಜೀವನದ ಮೊದಲ ಪಾಠ ಕಲಿಸಿದರೆ, ಶಿಕ್ಷಕರು ಅವರ ವ್ಯಕ್ತಿತ್ವಕ್ಕೆ ಸ್ಪಷ್ಟ ರೂಪ ನೀಡುತ್ತಾರೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವ ದಾರಿಯಲ್ಲಿ ಸಾಗಬೇಕು ಹಾಗೂ ಸಮಾಜಕ್ಕೆ ಹೇಗೆ ಕೊಡುಗೆ ನೀಡಬೇಕು ಎಂಬುದಕ್ಕೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುತ್ತಾರೆ ಎಂದರು.

ಸಕಲೇಶಪುರ: ಸಾಧಕನ ಹಿಂದೆ ಆತನಿಗೆ ವಿದ್ಯೆ, ಸಂಸ್ಕಾರ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರ ಕೊಡುಗೆ ಜೊತೆಗೆ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ನಗರದ ಶ್ರೀನಿವಾಸ ಕನ್ವೆನ್ಷನ್ ಹಾಲ್‌ನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಅತ್ಯಂತ ಪೂಜ್ಯನೀಯ ಸ್ಥಾನ ನೀಡಲಾಗಿದೆ. ಗುರುಗಳನ್ನು ದೇವರ ಸಮಾನವಾಗಿ ಕಾಣುವ ಪರಂಪರೆ ನಮ್ಮದು. ವ್ಯಕ್ತಿತ್ವ ನಿರ್ಮಾಣದಿಂದ ಹಿಡಿದು ದೇಶದ ಭವಿಷ್ಯ ರೂಪಿಸುವವರೆಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಶಿಕ್ಷಕರು ಮಕ್ಕಳ ಭವಿಷ್ಯದ ಶಿಲ್ಪಿಗಳಾಗಿದ್ದು, ಶಾಲೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ತಮ್ಮ ಸ್ವಂತ ಮಕ್ಕಳಂತೆ ಕಾಣುವ ಮನೋಭಾವ ಹೊಂದಿದ್ದಾರೆ. ಪಠ್ಯಪುಸ್ತಕದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಶಿಕ್ಷಕರು ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಂದೆ-ತಾಯಿ ಮಕ್ಕಳಿಗೆ ಜೀವನದ ಮೊದಲ ಪಾಠ ಕಲಿಸಿದರೆ, ಶಿಕ್ಷಕರು ಅವರ ವ್ಯಕ್ತಿತ್ವಕ್ಕೆ ಸ್ಪಷ್ಟ ರೂಪ ನೀಡುತ್ತಾರೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವ ದಾರಿಯಲ್ಲಿ ಸಾಗಬೇಕು ಹಾಗೂ ಸಮಾಜಕ್ಕೆ ಹೇಗೆ ಕೊಡುಗೆ ನೀಡಬೇಕು ಎಂಬುದಕ್ಕೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಹೀಗಾಗಿ ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ; ಅದು ಭವಿಷ್ಯದ ಪೀಳಿಗೆಯನ್ನು ನಿರ್ಮಿಸುವ ಪವಿತ್ರ ಜವಾಬ್ದಾರಿ ಎಂದು ಹೇಳಿದರು. ಸಕಲೇಶಪುರ ಹಾಗೂ ಆಲೂರು ತಾಲೂಕುಗಳ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರ ಪರಿಶ್ರಮ ಪ್ರಮುಖವಾಗಿದೆ. ಸಮಸ್ಯೆಗಳ ನಡುವೆಯೂ ವಿದ್ಯಾರ್ಥಿಗಳ ಮೇಲೆ ಕಾಳಜಿ ವಹಿಸಿ ಉತ್ತಮ ಬೋಧನೆ ಹಾಗೂ ಮಾರ್ಗದರ್ಶನ ನೀಡುತ್ತಿರುವ ಶಿಕ್ಷಕರಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಸಾಧಿಸುತ್ತಿದ್ದಾರೆ. ಇದರ ನಿಜವಾದ ಶ್ರೇಯಸ್ಸು ಶಿಕ್ಷಕರಿಗೆ ಸಲ್ಲಬೇಕು ಎಂದು ಸಿಮೆಂಟ್ ಮಂಜು ಶ್ಲಾಘಿಸಿದರು.

ಮಾಜಿ ಸಚಿವ ಕುಮಾರಸ್ವಾಮಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ಮಲೆನಾಡು ಭಾಗದ ಮಟ್ಟದಲ್ಲಿ ಸಕಲೇಶಪುರ ಮತ್ತು ಆಲೂರು ತಾಲೂಕುಗಳ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡುತ್ತಿರುವುದು ಸಂತಸದ ಸಂಗತಿ. ಈ ಭಾಗದಲ್ಲಿ ಹಲವು ಸಮಸ್ಯೆಗಳಿದ್ದರೂ ಶಿಕ್ಷಕರು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಂಡು ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು. ಶಿಕ್ಷಕರ ಪರಿಶ್ರಮ ಹಾಗೂ ಶಿಕ್ಷಣ ಕ್ಷೇತ್ರದ ಸಾಧನೆಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದೊಂದಿಗೆ ತಮಗೆ ಆತ್ಮೀಯ ಸಂಬಂಧವಿದ್ದು, ತಾವು ಕೂಡ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವುದರಿಂದ ಶಿಕ್ಷಕರ ಕಷ್ಟ-ಸವಾಲುಗಳ ಅರಿವಿದೆ ಎಂದು ಹೇಳಿದರು.

ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವಂತೆ ಆಶಯ ವ್ಯಕ್ತಪಡಿಸುವ ಮೂಲಕ ಶಿಕ್ಷಕ ವೃತ್ತಿಯ ಗೌರವವನ್ನು ಹೆಚ್ಚಿಸಿದ ಮಾಜಿ ರಾಷ್ಟ್ರಪತಿ ಹಾಗೂ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಗಣ್ಯರು ಸ್ಮರಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಕ್ಷೇತ್ರದ ಎಲ್ಲ ಶಿಕ್ಷಕ-ಶಿಕ್ಷಕಿಯರಿಗೆ ಶುಭಾಶಯ ಕೋರಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎಚ್.ಎಂ. ವಿಶ್ವನಾಥ್, ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶಾರದಾ ಗುರುಮೂರ್ತಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.