ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಜಾಗವೇ ಅಂತಿಮ: ಸಚಿವ ಚಲುವರಾಯಸ್ವಾಮಿ

| Published : Nov 15 2024, 12:33 AM IST

ಸಾರಾಂಶ

ಈಗಾಗಲೇ ಸಮ್ಮೇಳನ ಸಂಘಟನೆಗಾಗಿ ಸಾಕಷ್ಟು ಕಾರ್ಯಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸುವ ದೃಷ್ಟಿಯಲ್ಲಿ ೨೮ ಸಮಿತಿಗಳನ್ನು ರಚಿಸಿದ್ದು, ಎಲ್ಲಾ ಸಮಿತಿಗಳ ಅಧ್ಯಕ್ಷತೆಯನ್ನು ಜಿಲ್ಲೆಯ ಎಲ್ಲಾ ಶಾಸಕರು ವಹಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯುವ ಜಾಗವನ್ನು ತಾಂತ್ರಿಕ ಪರಿಣಿತರ ತಂಡದ ಮೂಲಕ ಪರಿಶೀಲಿಸಿ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಮಂಡ್ಯದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಕರ್ನಾಟಕದ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶಗೌಡ ನೇತೃತ್ವದಲ್ಲಿ ಸಭೆ ನಡೆಸಿ, ಮಂಡ್ಯ ನಗರದಲ್ಲಿಯೇ ಸಮ್ಮೇಳನ ಆಯೋಜಿಸಬೇಕು ಎಂಬ ನಿರ್ಣಯ ಅಂಗೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ, ಸ್ಥಳದ ಆಯ್ಕೆ ನನ್ನ ನಿರ್ಧಾರವಲ್ಲ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಿತಿಗಳ ಆಯ್ಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.

ಈ ಎಲ್ಲಾ ಬೆಳವಣಿಗೆ ನಂತರ ಸಚಿವ ಚಲುವರಾಯಸ್ವಾಮಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಜಾಗವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಸಮ್ಮೇಳನ ಸಂಘಟನೆಗಾಗಿ ಸಾಕಷ್ಟು ಕಾರ್ಯಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸುವ ದೃಷ್ಟಿಯಲ್ಲಿ ೨೮ ಸಮಿತಿಗಳನ್ನು ರಚಿಸಿದ್ದು, ಎಲ್ಲಾ ಸಮಿತಿಗಳ ಅಧ್ಯಕ್ಷತೆಯನ್ನು ಜಿಲ್ಲೆಯ ಎಲ್ಲಾ ಶಾಸಕರು ವಹಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ. ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನಕ್ಕೆ ಸ್ಥಳ ಅಯ್ಕೆಗೆ ಸಂಬಂಧಿಸಿದಂತೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸೂಕ್ತವಾದ ಜಾಗವನ್ನು ಆಯ್ಕೆ ಮಾಡುವ ಸಂಬಂಧ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.