ಬಳ್ಳಾರಿ: ಭಾರತದ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಬಳ್ಳಾರಿ ಜಿಲ್ಲೆಯ ಕೊಡುಗೆ ಅವಿಸ್ಮರಣೀಯ. ಬ್ರಿಟಿಷ್ ಆಳ್ವಿಕೆಯ ವಿರುದ್ಧ ಧ್ವನಿ ಎತ್ತಿದ ಕಲ್ಯಾಣ ಕರ್ನಾಟಕದ ಈ ಐತಿಹಾಸಿಕ ನೆಲ, ದಕ್ಷಿಣ ಭಾರತದಲ್ಲಿ ಸ್ವಾತಂತ್ರ‍್ಯ ಸಂಗ್ರಾಮದ ಪ್ರಮುಖ ಕೇಂದ್ರವಾಗಿ ಕ್ರಾಂತಿಯ ಕಿಚ್ಚನ್ನು ಹೊತ್ತಿಸಿತ್ತು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಬಿಎಂಸಿಆರ್‌ಸಿ ಮೈದಾನದಲ್ಲಿ ಶನಿವಾರ ಜರುಗಿದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಬಳ್ಳಾರಿಯ ಜನತೆ ತೋರಿದ ತ್ಯಾಗ, ಬಲಿದಾನ ಮತ್ತು ಹೋರಾಟದ ಕಿಚ್ಚು ಕರ್ನಾಟಕ ಹಾಗೂ ಭಾರತದ ಸ್ವಾತಂತ್ರ್ಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಉಳಿಯುವಂತಹದ್ದು. ಬಳ್ಳಾರಿ ಭಾಗದ ಹೋರಾಟಗಾರರನ್ನು ಹುರಿದುಂಬಿಸಲೆಂದೇ ಮಹಾತ್ಮಾ ಗಾಂಧೀಜಿ ಅವರು ಬಳ್ಳಾರಿಗೆ ಎರಡು ಬಾರಿ ಭೇಟಿ ನೀಡಿದ್ದರು. ಇಲ್ಲಿನ ಐತಿಹಾಸಿಕ ಅಲಿಪುರ ಜೈಲಿನಲ್ಲಿ ಸಿ. ರಾಜಗೋಪಾಲಚಾರಿ ಸೇರಿದಂತೆ ಅನೇಕ ಮಹಾನ್ ನಾಯಕರು ಸೆರೆವಾಸ ಅನುಭವಿಸಿದ್ದರು ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಬಳ್ಳಾರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ತಲುಪಿದ್ದು, ದೇಶದ ಇತರ ರಾಜ್ಯಗಳಿಗೂ ಮಾದರಿಯಾಗಿವೆ. ಮಳೆಯಿಲ್ಲದೆ ಎದುರಾಗಿರುವ ಗಂಭೀರ ಪರಿಸ್ಥಿತಿಯನ್ನು ಪರಿಗಣಿಸಿ ಬಳ್ಳಾರಿ, ಸಂಡೂರು, ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಗ್ರಾಮೀಣ ಭಾಗದ ಜನ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯಡಿ ವ್ಯಾಪಕ ಕೆಲಸ ಒದಗಿಸಲಾಗುತ್ತಿದೆ ಎಂದು ಹೇಳಿದರು.ಒತ್ತುವರಿ ತೆರವು ಕಾರ್ಯಾಚರಣೆ:
ಬಳ್ಳಾರಿ ನಗರದ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಹಮ್ಮಿಕೊಂಡಿದ್ದು, ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 14 ಕಾರ್ಯಾಚರಣೆಗಳ ಮೂಲಕ ₹551.25 ಕೋಟಿ ಮೌಲ್ಯದ 126 ಎಕರೆ ಒತ್ತುವರಿ ಜಮೀನು ವಶಕ್ಕೆ ಪಡೆದು ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಿಡಲಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಜಿಲ್ಲೆಯಲ್ಲಿ ಕ್ರೀಡೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.
ನಗರದ ಬಿಎಂಸಿಆರ್‌ಸಿ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಕರ್ಷಕ ಪಥಸಂಚಲನ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಕಣ್ಮನ ಸೆಳೆದವು.ಪ್ರಮುಖ ಆಕರ್ಷಣೆಯಾಗಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿ ತಂಡಗಳಿಂದ ಶಿಸ್ತುಬದ್ಧ ಪಥಸಂಚಲನ ಜರುಗಿತು. ನಂತರ ವಿವಿಧ ಶಾಲಾ ಮಕ್ಕಳಿಂದ ನಡೆದ ವೈವಿಧ್ಯಮಯ ನೃತ್ಯ ಮತ್ತು ಪ್ರದರ್ಶನಗಳು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದವು. ಪಥಸಂಚಲನ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಬಳಿಕ ಸಚಿವರು, ಮಹಾನಗರ ಪಾಲಿಕೆಯ 46 ಕಸ ಸಂಗ್ರಹಣೆ ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಮೇಯರ್ ಪಿ. ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಪಿ.ಎಸ್. ಹರ್ಷ, ಡಿಸಿ ನಾಗೇಂದ್ರ ಪ್ರಸಾದ್ ಕೆ., ಎಸ್ಪಿ ಡಾ. ಸುಮನ್ ಡಿ. ಪನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಎಡಿಸಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಇದ್ದರು.