ಕನ್ನಡಪ್ರಭ ವಾರ್ತೆ ಹಾಸನ

ಕರ್ನಾಟಕ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿ.ಆರ್.ಸಿ.)-೨೦೨೬ ಅಧಿಸೂಚನೆಯು ಸಾಂವಿಧಾನಿಕ ಮಾನ್ಯತೆ, ಕಾನೂನುಬದ್ಧತೆ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಿ ಅಧಿಸೂಚನೆಯನ್ನು ಪರಿಶೀಲಿಸಬೇಕು ಹಾಗೂ ಈ ಬಗ್ಗೆ ಜುಲೈ ೧೩ರ ಸೋಮವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಏನಾದರೂ ಸ್ಪಂದನೆ ದೊರೆಯದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನವು ದೇಶದಾದ್ಯಂತ ಒಂದೇ ಪೌರತ್ವ ವ್ಯವಸ್ಥೆಯನ್ನು ಒದಗಿಸಿದೆ. ಆದರೆ ರಾಜ್ಯ ಸರ್ಕಾರವು ‘ಶಾಶ್ವತ ನಿವಾಸಿ’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಈ ಕ್ರಮಕ್ಕೆ ಸ್ಪಷ್ಟವಾದ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ಮುಂದಾಗಿರುವುದರಿಂದ ಸಂವಿಧಾನದ ೧೪ನೇ ವಿಧಿಯಡಿ ನೀಡಿರುವ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುವ ಸಾಧ್ಯತೆಯಿದೆ ಎಂದರು. ಅಧಿಸೂಚನೆಯಲ್ಲಿ ಸೂಚಿಸಿರುವ ಅರ್ಹತಾ ಮಾನದಂಡಗಳು ಮುಖ್ಯವಾಗಿ ಸ್ಥಳೀಯ ಕಂದಾಯ ಅಧಿಕಾರಿಗಳ ನಿವಾಸ ಪರಿಶೀಲನೆಗೆ ಆಧಾರಿತವಾಗಿದ್ದು, ಸಮರ್ಥ ಕೇಂದ್ರ ಸಂಸ್ಥೆಗಳ ಮೂಲಕ ಭಾರತೀಯ ಪೌರತ್ವವನ್ನು ಕಡ್ಡಾಯವಾಗಿ ಪರಿಶೀಲಿಸುವ ವ್ಯವಸ್ಥೆಯಿಲ್ಲ. ಇದರಿಂದ ಅಕ್ರಮ ವಲಸಿಗರು ಅಥವಾ ವಿದೇಶಿ ಪ್ರಜೆಗಳು ನಕಲಿ ದಾಖಲೆಗಳ ಮೂಲಕ ಪ್ರಮಾಣಪತ್ರ ಪಡೆಯುವ ಅಪಾಯವಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಇಂತಹ ಪ್ರಮಾಣಪತ್ರದ ಆಧಾರದ ಮೇಲೆ ಸರ್ಕಾರಿ ಸೌಲಭ್ಯಗಳು, ಶಿಕ್ಷಣ ಪ್ರವೇಶ, ಉದ್ಯೋಗಾವಕಾಶಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಲಾಭ ಪಡೆಯುವ ಅವಕಾಶ ಸಿಗಬಹುದು. ಇದು ಅಕ್ರಮ ವಾಸವನ್ನು ಕಾನೂನುಬದ್ಧಗೊಳಿಸುವುದರ ಜೊತೆಗೆ ಅಕ್ರಮ ವಲಸಿಗರನ್ನು ಗುರುತಿಸಿ ಕ್ರಮ ಕೈಗೊಳ್ಳುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೂ ಅಡ್ಡಿಯಾಗಬಹುದು ಎಂದು ಹೇಳಿದರು.ಪೌರತ್ವ, ವಿದೇಶಿಯರ ನಿಯಂತ್ರಣ, ವಲಸೆ ಹಾಗೂ ಆಂತರಿಕ ಭದ್ರತೆ ವಿಷಯಗಳು ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸೇರಿರುವುದರಿಂದ, ರಾಜ್ಯ ಮಟ್ಟದಲ್ಲಿ ಇಂತಹ ಪ್ರತ್ಯೇಕ ವ್ಯವಸ್ಥೆ ರೂಪಿಸುವುದು ಕೇಂದ್ರದ ಏಕರೂಪದ ಕಾನೂನು ವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ-೨೦೨೬ರ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯವು ಸಮರ್ಥ ಅಧಿಕಾರಿಯನ್ನು ನೇಮಿಸಬೇಕು. ಪರಿಶೀಲನೆ ಪೂರ್ಣಗೊಳ್ಳುವವರೆಗೆ ಅಧಿಸೂಚನೆಯ ಅನುಷ್ಠಾನವನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಜೊತೆಗೆ ಅಧಿಸೂಚನೆ ಹೊರಡಿಸಿರುವ ಕಾನೂನು ಮತ್ತು ಸಾಂವಿಧಾನಿಕ ಆಧಾರದ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿ ಪಡೆಯಬೇಕು ಎಂದು ಒತ್ತಾಯಿಸಿದರು. ಭಾರತೀಯ ಪೌರತ್ವದ ಸಮಗ್ರ ಪರಿಶೀಲನೆ ಇಲ್ಲದೆ ಯಾವುದೇ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಬಾರದು. ದೇಶದ ಸಾಂವಿಧಾನಿಕ ವ್ಯವಸ್ಥೆ, ಸಮಾನತೆಯ ತತ್ವ ಹಾಗೂ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದರು. ರಾಜ್ಯ ಸರ್ಕಾರವು ರಾಜಕೀಯಕ್ಕಿಂತ ಸಾರ್ವಜನಿಕರ ಹಿತಾಸಕ್ತಿಗೆ ಆದ್ಯತೆ ನೀಡಬೇಕು. ಸಂವಿಧಾನದ ಉಲ್ಲಂಘನೆಯಾಗುವಂತಹ ಕ್ರಮಗಳನ್ನು ಕೈಬಿಡಬೇಕು ಎಂದು ಅವರು ಹೇಳಿದರು.ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಮಾತನಾಡಿ, ಕರ್ನಾಟಕ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ರಾಜಕುಮಾರ್, ಎಸ್. ಡಿ. ಚಂದ್ರು, ಪ್ರಕಾಶ್, ವೇದಾವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

----


* ಬಾಕ್ಸ್‌::::: ಮೆಕ್ಕೆಜೋಳಕ್ಕೆ ಬಿಳಿಸುಳಿ ರೋಗ: ರೈತರಿಗೆ ಪರಿಹಾರ ನೀಡುವಂತೆ ಒತ್ತಾಯ:

ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಬಿಳಿಸುಳಿ ರೋಗ ವ್ಯಾಪಕವಾಗಿ ಕಾಣಿಸಿಕೊಂಡು ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಪ್ರಶ್ನೆ ಎತ್ತಿ ಪರಿಹಾರಕ್ಕೆ ಒತ್ತಾಯಿಸಿದ್ದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ರೈತರ ಜಮೀನುಗಳ ಸ್ಥಿತಿ ಆತಂಕಕಾರಿ ಆಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕವೂ ಚರ್ಚಿಸಲಾಗಿದೆ. ಆಲೂಗಡ್ಡೆ, ಮೆಕ್ಕೆಜೋಳ ಸೇರಿದಂತೆ ವಾಣಿಜ್ಯ ಬೆಳೆಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಮೊದಲು ಭೂಮಿಯ ಫಲವತ್ತತೆ ಕಾಪಾಡುವ ಕ್ರಮಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ರೈತರ ಬೆಳೆಗೆ ಸೂಕ್ತ ಮಾನ್ಯತೆ ಮತ್ತು ಪರಿಹಾರ ಒದಗಿಸಬೇಕು ಎಂದು ಶಾಸಕ ಸಿಮೆಂಟ್‌ ಮಂಜು ಸಲಹೆ ನೀಡಿದರು.