ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ತೋರಿದ ಆಸಕ್ತಿಯನ್ನು ರಾಜ್ಯದ ಕೆರೆಗಳು, ನಾಲೆಗಳಿಗೆ ನೀರು ಹರಿಸಲು ಮುಂದಾಗಲಿಲ್ಲ. ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ಕಾರಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ದೂರಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ಪದಾಧಿಕಾರಿಗಳಿಗೆ ನೇಮಕಾತಿ ಪತ್ರವನ್ನು ನೀಡಿ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಶಾಸಕರು ಎಲ್ಲಾ ಹಂತದ ಕೆರೆಗಳಿಗೆ ನೀರು ತುಂಬಿಸಲು ಪ್ರಥಮ ಅದ್ಯತೆ ನೀಡಿದ್ದೇವೆ ಎಂದರು. ರೈತರ ಜಮೀನುಗಳಿಗೆ ನೀರು ಹರಿಯಲು ಪರಿಣಾಮಕಾರಿಯಾಗಿ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದೇವೆ. ಆದರೆ, ಈಗಿನ ಶಾಸಕರು, ಮಂತ್ರಿಗಳು ಇದ್ಯಾವುದಕ್ಕು ತಲೆಕೆಡಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದರಲ್ಲಿ ನಿಸ್ಸೀಮರು, ಜನರ ಕೆಲಸ ಮಾಡುವಲ್ಲಿ ಅವರು ಹಿಂದೆ ಬಿದಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದ ಈ ದೇಶ ಕಂಡ ಅತ್ಯುತ್ತಮ ಪ್ರಧಾನಿಯಾಗಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ರೀತಿಯಲ್ಲಿ ಛಾಪು ಮೂಡಿಸಿಕೊಂಡು ದೇಶದ ಸಮಗ್ರ ಅಭಿವೃದ್ಧಿಯನ್ನು ಮಾಡಿದ್ದಾರೆ. ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿದರೆ, ಈ ದೇಶಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದರು. ವಿದೇಶಿಗರು ಮಾತನಾಡುತ್ತಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಹಾಗೂ ಮೋದಿಗೆ ಮತ ಹಾಕಲು ಮುಂದಾಗಿದ್ದಾರೆ. ಈಗ ನೇಮಕವಾಗಿರುವ ಪದಾಧಿಕಾರಿಗಳು ಸಕ್ರಿಯವಾಗಿ ಬಿಜೆಪಿಗೆ ಮತ ಹಾಕಲು ಮುಂದಾಗಬೇಕು ಎಂದು ತಿಳಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಪ್ರಭಾರಿ ಎನ್.ವಿ. ಫಣೀಶ್ ಮಾತನಾಡಿ, ಈಗ ನೇಮಕಗೊಂಡು ಆದೇಶ ಪತ್ರವನ್ನು ಪಡೆದುಕೊಂಡಿರುವ ಪದಾಧಿಕಾರಿಗಳು ಸಕ್ರಿಯವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಇನ್ನು ಎರಡು ತಿಂಗಳ ಅವಧಿಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಹಗಲು ರಾತ್ರಿಯೆನ್ನದೇ ದುಡಿದು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಮೋದಿ ಸರ್ಕಾರಕ್ಕೆ ಕೊಡುಗೆಯನ್ನು ನೀಡಬೇಕು ಎಂದರು.ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಸಂಚಾಲಕ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ ಇದ್ದರು.