ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಸರ್ಕಾರ ಇದುವರೆಗೂ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.
ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲವನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲ
ಕನ್ನಡಪ್ರಭ ವಾರ್ತೆ ಗದಗರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಸರ್ಕಾರ ಇದುವರೆಗೂ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ರೈತರ ನೆರವಿಗೆ ಧಾವಿಸಿಲ್ಲ ಹಾಗಾಗಿ ಜನತೆಯ ಪಾಲಿಗೆ ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬುಧವಾರ ಗದಗ ನಗರದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ರೈತರಿಗೆ ಸಮರ್ಪಕವಾಗಿ ಏಳು ಗಂಟೆ ತ್ರೀ ಫೇಸ್ ವಿದ್ಯುತ್ ನೀಡುತ್ತಿಲ್ಲ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಂತಾಗಿದೆ. ಗದಗ ನಗರದಲ್ಲಂತೂ 20 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಶಾಸಕ ಎಚ್.ಕೆ. ಪಾಟೀಲರು ಹಿರಿಯ ರಾಜಕಾರಣಿಯಾಗಿದ್ದು, ಜಿಲ್ಲೆಯ ಜನತೆಯ ಈ ದುಃಸ್ಥಿತಿಗೆ ಅವರೇ ಉತ್ತರಿಸಬೇಕು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ದಂಧೆಯಲ್ಲಿ ಮುಳುಗಿದ್ದಾರೆ. ಬರಗಾಲದ ಸಂದರ್ಭದಲ್ಲೂ ದೆಹಲಿ ಹಾಗೂ ಬೆಂಗಳೂರಿನ ಎಸಿ ಕೋಣೆಗಳಲ್ಲಿ ಕುಳಿತು ಕಾಲ ಕಳೆಯುತ್ತಿದ್ದಾರೆ. ರೈತರಿಗೆ ಭಿಕ್ಷೆ ನೀಡುವ ರೀತಿಯಲ್ಲಿ ಕೇವಲ ₹2500 ರುಪಾಯಿ ಘೋಷಣೆ ಮಾಡಲಾಗಿದ್ದು, ಅದು ಕೂಡ ಇದುವರೆಗೂ ಅನ್ನದಾತರ ಕೈಸೇರಿಲ್ಲ.ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿಲ್ಲ. ಮಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ₹32 ಸಾವಿರ ಕೋಟಿ ಯೋಜನೆಗಳನ್ನು ಘೋಷಿಸಿದರು. ಆದರೆ, ಅದರ ಬೆನ್ನಲ್ಲೇ ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂಗೆ ಪತ್ರ ಬರೆದು, ಯಾವುದೇ ಹೊಸ ಯೋಜನೆ ಘೋಷಿಸಬೇಡಿ ಎಂದು ತಿಳಿಸಿದ್ದಾರೆ. ಸರ್ಕಾರಿ ನೌಕರರಿಗೆ, ಸಾರಿಗೆ ಸಿಬ್ಬಂದಿಗೆ ಸರಿಯಾಗಿ ವೇತನ ನೀಡಲಾಗುತ್ತಿಲ್ಲ. ಒಟ್ಟಾರೆಯಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ತೀವ್ರವಾಗಿದೆ. ನಾಳೆಯೇ ಚುನಾವಣೆ ನಡೆದರೆ, ಪ್ರಸ್ತುತ 138ಕ್ಕೂ ಹೆಚ್ಚು ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಕೇವಲ 38 ಸ್ಥಾನಗಳಿಗೆ ಕುಸಿಯಲಿದೆ ಎಂದು ಭವಿಷ್ಯ ನುಡಿದರು. ಸುದ್ದಿಗೋಷ್ಠಿಯಲ್ಲಿ ನರಗುಂದ ಶಾಸಕ ಸಿ.ಸಿ. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮುಖಂಡರಾದ ಅನಿಲ ಮೆಣಸಿನಕಾಯಿ, ಮಾಜಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಪ್ರಕಾಶ ಅಂಗಡಿ, ವಿಜಯಲಕ್ಷ್ಮೀ ಮಾನ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.