ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಎಲ್ಲಾ ಸಮುದಾಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾ ಆದಾಯ ಹೆಚ್ಚಳವಾಗಲು ಸಾಧ್ಯ. ಯಾವುದೇ ದೇಶದ ಅಭಿವೃದ್ಧಿ ಹಳ್ಳಿ, ತಾಲೂಕು, ಜಿಲ್ಲೆಗಳ ಅಭಿವೃದ್ಧಿಯ ಮೇಲೆ ನಿಂತಿದೆ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ಭೇದವಿಲ್ಲದೆ ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದರು.
ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಎಲ್ಲಾ ವರ್ಗದ ಜನರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಆರ್ಥಿಕತೆಯ ವೇಗವೂ ಹೆಚ್ಚಾಗಿದೆ ಎಂದು ತಿಳಿಸಿದರು. ಕಳೆದ ಜನವರಿ ಮಾಹೆಯಲ್ಲಿ ಇದೇ ವೇದಿಕೆಯಲ್ಲಿ 697 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ವಿವಿಧ ಯೋಜನೆಗಳಲ್ಲಿ 30 ಸಾವಿರ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿತ್ತು. ಇಂದು ಈ ವೇದಿಕೆಯಿಂದ 1250 ಕೋಟಿ ರು.ಗಳಿಗೂ ಹೆಚ್ಚಿನ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ 1.50 ಲಕ್ಷ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸುತ್ತಿರುವುದು ನನಗೆ ಸಂತಸ ತಂದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನದಿಂದ ಅಭಿವೃದ್ಧಿ ಕಾಮಗಾರಿಗೆ ಹಣವಿಲ್ಲವೆಂದು ಟೀಕಿಸುವವರಿಗೆ ಇಂತಹ ಕಾರ್ಯಕ್ರಮಗಳು ಉತ್ತರವಾಗಲಿದೆ ಎಂದರು. ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಕೊಡುತ್ತಲೇ ಬಂದಿದೆ. ಅಲ್ಲದೆ, ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳನ್ನು ರಾಜ್ಯದಲ್ಲಿ ಮಾತ್ರ ಅನುಷ್ಟಾನ ಮಾಡಲಾಗಿದೆ ಎಂದು ತಿಳಿಸಿದರು ನಮ್ಮ ಸರ್ಕಾರ ಮಹಿಳೆಯರು, ಎಲ್ಲಾ ಜಾತಿ ಹಾಗೂ ಧರ್ಮ, ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.