ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವಿದ್ಯಾರ್ಥಿಗಳ ಸಾಧನೆ ರಾಜ್ಯಕ್ಕೆ ಹೆಮ್ಮೆಯ ವಿಷಯ. ಶಿಕ್ಷಣದ ಮೂಲಕವೇ ದೇಶದ ಅಭಿವೃದ್ಧಿ ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗದೆ, ಕೌಶಲ್ಯ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನೂ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯಿಂದ 2025- 26ನೇ ಸಾಲಿನ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಾಧಕರಿಗೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಹಮ್ಮಿಕೊಂಡಿದ್ದ, ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಯುಪಿಎಸ್‌ಸಿ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುತ್ತಿರುವ ಗ್ರಾಮೀಣ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ದೆಹಲಿಯಲ್ಲಿ ವಿಶೇಷ ತರಬೇತಿ ಕೇಂದ್ರದ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯ ಪ್ರತಿಯೊಂದು ತಾಲೂಕಿನಿಂದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಇದರ ಸೌಲಭ್ಯ ದೊರೆಯಲಿದೆ ಎಂದರು.

ಯಮಕನಮರಡಿ, ಹಾರೂಗೇರಿ ಹಾಗೂ ಗೋಕಾಕದಲ್ಲಿ ಹೈಟೆಕ್ ಗ್ರಂಥಾಲಯಗಳ ನಿರ್ಮಾಣ ಮತ್ತು ಸರಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳಾಗಿ ಪರಿವರ್ತಿಸುವ ಕಾರ್ಯವೂ ಪ್ರಗತಿಯಲ್ಲಿದೆ. ನಮ್ಮ ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ದೇಶಕ್ಕೆ ಮಾದರಿಯಾಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.ಈ ವೇಳೆ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ಸಾಧನೆಗೈದ ಬಸವರಾಜ ಕೆಂಪವಾಡ, ಕಿರಣ್ ಕಮತೆ, ರಾಹುಲ್ ಪಾಟೀಲ, ಬಸವರಾಜ ಪಾಟೀಲ ಅವರನ್ನು ಹಾಗೂ ಎಸ್‌ಎಸ್ಎಲ್ ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಮಹಾಂತೇಶ ಕೌಜಲಗಿ, ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಜಿಪಂ ಸಿಇಒ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿಡಿಪಿಐ ಲೀಲಾವತಿ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.