ಅಪರಾಧ ತಡೆಗೆ ರಾಜ್ಯದ ಪೊಲೀಸರು ಹೆಸರುವಾಸಿ: ಚಂದ್ರಶೇಖರ

| Published : Apr 03 2024, 01:35 AM IST

ಸಾರಾಂಶ

ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು. ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಅಪರಾಧಗಳನ್ನು ಕಂಡುಹಿಡುವಲ್ಲಿ ಮತ್ತು ತಡೆಗಟ್ಟುವಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯದ ಪೊಲೀಸರು ಹೆಸರುವಾಸಿಯಾಗಿದ್ದು, ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುತ್ತಿದೆ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು.

ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಿಂದೆ ಪೊಲೀಸ್ ಇಲಾಖೆಯಲ್ಲಿ ಯಾವುದೇ ಆಧುನಿಕ ತಂತ್ರಜ್ಞಾನಗಳು ಇಲ್ಲದಿದ್ದಾಗ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸಲಾಗುತ್ತಿತ್ತು. ಮತ್ತು ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ಪತ್ತೆ ಹಚ್ಚುವ ಹಾಗೂ ತಡೆಗಟ್ಟಲಾಗುತ್ತಿತ್ತು. ಪ್ರಸ್ತುತ ದಿನಮಾನಗಳಲ್ಲಿ ಪೊಲೀಸ್ ಇಲಾಖೆಯ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಹೆಚ್ಚಿನ ರೀತಿಯಲ್ಲಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಇಲಾಖೆಯಿಂದ ನಿವೃತ್ತ ಪೊಲೀಸರಿಗೆ ಆರೋಗ್ಯ ಭಾಗ್ಯ ಯೋಜನೆಯಡಿ ವೈದ್ಯಕೀಯ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಇದರಿಂದ ನಿವೃತ್ತ ಪೊಲೀಸ್ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮತ್ತು ಆರೋಗ್ಯ ಭದ್ರತೆ ಒದಗಿಸಿದಂತಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, 2023-24ನೇ ಸಾಲಿನಲ್ಲಿ ಆರೋಗ್ಯ ಭಾಗ್ಯ ಯೋಜನೆಯಡಿ ಒಟ್ಟು 247 ಜನ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲಾಗಿದ್ದು, ನಿವೃತ್ತ ಪೊಲೀಸ್ ಅಧಿಕಾರಿಗಳ ನಿಧಿಯಿಂದ 58 ಜನ ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ 8,00,855 ರು.ಗಳನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

8 ಜನ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಶವಸಂಸ್ಕಾರಕ್ಕಾಗಿ 80,000 ರು.ಗಳನ್ನು ಪಾವತಿಸಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ 8,41,000 ರು.ಗಳ ಸಹಾಯಧನ, ನಿವೃತ್ತಿ ಹೊಂದಿದ 27 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಳ್ಕೊಡುಗೆ ಕಲ್ಯಾಣ ಕಾರ್ಯಕ್ರಮಕ್ಕಾಗಿ 1,35,000 ಸೇರಿದಂತೆ ಇನ್ನಿತರ ಕಲ್ಯಾಣ ಕಾರ್ಯಕ್ರಮಕ್ಕಾಗಿ ಒಟ್ಟು 11,10,000 ರು.ಗಳನ್ನು ಪಾವತಿಸಲಾಗಿದೆ ಎಂದರು.

ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ, ಪೊಲೀಸ್ ಸಿಬ್ಬಂದಿಯಿಂದ ಹಾಗೂ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಆ ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಕರ್ತವ್ಯದಲ್ಲಿದ್ದ ಸಿಬ್ಬಂದಿ ಕಲ್ಯಾಣ ಕಾರ್ಯಕ್ರಮಗಳಿಗೆ ಉಪಯೋಗಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಸುಮಾರು 29 ಜನ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಒಂದನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಶಿವಕುಮಾರ, ಎರಡನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ ಸೇರಿ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಕುಟುಂಬ ಸದಸ್ಯರು, ಸಾರ್ವಜನಿಕರು ಇದ್ದರು.