ಸಾರಾಂಶ
ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೇರವೇರಿಸಿ ಸಂದೇಶ ನೀಡಿದರು.
ಅಜ್ಜರಕಾಡು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ
ಕನ್ನಡಪ್ರಭ ವಾರ್ತೆ ಉಡುಪಿ
2024 -25ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಅವರು ಶುಕ್ರವಾರ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಸಂದೇಶ ನೀಡಿದರು.ಪಂಚಾಯಿತಿಗಳ ವಿಕೇಂದ್ರೀಕರಣ ಕುರಿತು ದೇಶದ ಎಲ್ಲ ರಾಜ್ಯಗಳಲ್ಲಿ ನಡೆಸಲಾದ ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯ ಬಿಡುಗಡೆ ಮಾಡಿದ್ದು, ಈ ಸೂಚ್ಯಂಕದಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ಸಚಿವೆ ಸಂತಸ ವ್ಯಕ್ತಪಡಿಸಿದರು.ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 151 ಕೋಟಿ ರು. ವೆಚ್ಚದಲ್ಲಿ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 192.52 ಹೆಕ್ಟೇರ್ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಲಿದೆ. ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪರಿಶೀಲನಾ ಹಂತದಲ್ಲಿದೆ ಎಂದು ಸಚಿವೆ ತಿಳಿಸಿದರು. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಶಿವಪುರ, ಕೆರೆಬೆಟ್ಟು, ನಿಟ್ಟೆ, ಉಪ್ಪೂರು, ಸಾಂತೂರು ಹಾಗೂ ಎಲ್ಲೂರು ಗ್ರಾಮಗಳಲ್ಲಿ ಒಟ್ಟು 1207.34 ಎಕ್ರೆ ಜಮೀನನ್ನು ಗುರುತಿಸಲಾಗಿದ್ದು, ಇವು ಪ್ರಗತಿಯ ಹಂತದಲ್ಲಿವೆ. ಈ ಬಾರಿಯ ಮಳೆಯಿಂದ ನಷ್ಟಕ್ಕೊಳಗಾದವರಿಗೆ 1.14 ಲಕ್ಷ ರು. ಪರಿಹಾರ ಒದಗಿಸಲಾಗಿದೆ ಎಂದರು.ಇದಕ್ಕೆ ಮೊದಲು ಸಚಿವರು ಪೊಲೀಸ್, ಅಗ್ನಿಶಾಮಕ, ಎನ್‌ಸಿಸಿ ತಂಡಗಳ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿದ ಸಚಿವೆ, ಗೌರವರಕ್ಷೆಯನ್ನು ಸ್ವೀಕರಿಸಿದರು. ಸಭಾ ಕಾರ್ಯಕ್ರಮದ ನಂತರ ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.ಆಜಾದ್ ಪ್ರತಿಭಾಪುರಸ್ಕಾರ:ಜಿಲ್ಲೆಯಲ್ಲಿ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ‘ಮೌಲಾನಾ ಅಬ್ದುಲ್ ಕಲಾಂ ಅಜಾದ್ ಪ್ರತಿಭಾ ಪುರಸ್ಕಾರ’ ನೀಡಿ ಸಚಿವರು ಗೌರವಿಸಿದರು.ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಊಡಾ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ಎಸ್ಪಿ ಹರಿರಾಮ್ ಶಂಕರ್, ಎಡಿಸಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.