ವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಖಳನಾಯಕನಂತೆ ಬಿಂಬಿಸುವ ಮೂಲಕ ಅವರ ಸಮಗ್ರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸವನ್ನು ಲೇಖಕ ರವಿ ಹಂಜ್ ಮಾಡಿದ್ದಾರೆ. ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ಇಬ್ಬರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಆಗ್ರಹಿಸಿದರು

ಕನ್ನಡಪ್ರಭ ವಾರ್ತೆ ವಿಜಯಪುರವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಖಳನಾಯಕನಂತೆ ಬಿಂಬಿಸುವ ಮೂಲಕ ಅವರ ಸಮಗ್ರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸವನ್ನು ಲೇಖಕ ರವಿ ಹಂಜ್ ಮಾಡಿದ್ದಾರೆ. ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ಇಬ್ಬರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಆಗ್ರಹಿಸಿದರು.ನಗರದ ನೂತನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣನವರನ್ನು ಖಳನಾಯಕನಂತೆ ಬಿಂಬಿಸಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ. ಬಸವಣ್ಣನವರು ಕಳಬೇಡ, ಕೊಲಬೇಡ, ಹುಸಿಯ ನುಡಿಯಬೇಡ. ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ. ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ದಿ, ಇದೇ ನಮ್ಮ ಕೂಡಲಸಂಗಮ ದೇವರನೊಲಿಸುವ ಪರಿ ಎಂಬ ಮೌಲ್ಯಯುತ ಸಂದೇಶ ಸಾರುವ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ. ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಸರ್ವ ಜನಾಂಗದ ಉದ್ಧಾರಕ್ಕಾಗಿ ಸಂದೇಶ ನೀಡಿದ ಮಹಾನ್ ಮಾನವತಾವಾದಿ ಎಂದರು.

ಬಸವಣ್ಣನವರ ನಡತೆ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನಗಳು ಹಲವು ಸಂದರ್ಭಗಳಲ್ಲಿ ನಡೆದಿವೆ. ಬುದ್ಧ, ಬಸವ, ಅಂಬೇಡ್ಕರ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರನ್ನು ಅಪಮಾನಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪತ್ರಕರ್ತ ವಿಶ್ವೇಶ್ವರ ಭಟ್ ಅವರೂ ಬಸವಣ್ಣನವರ ವ್ಯಕ್ತಿತ್ವಕ್ಕೆ ವಿರುದ್ಧವಾದ ನಿಲುವು ಹೊಂದಿದ್ದು, ಅವರ ಮೇಲೆಯೂ ಕ್ರಮ ಕೈಗೊಳ್ಳಬೇಕು. ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಯಾರೇ ದೂಷಿಸಿದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಕೃತ್ಯದ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂಬ ಜಾಮದಾರ ಅವರ ಹೇಳಿಕೆಗೆ ನಮ್ಮ ಸಹಮತವಿದೆ ಎಂದು ತಿಳಿಸಿದರು.ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, ಪ್ರಸ್ತುತ ಚಾರಿತ್ರ್ಯಹರಣದ ರಾಜಕಾರಣ ನಡೆಯುತ್ತಿದೆ. ಐತಿಹಾಸಿಕ ಪುರುಷರು ಹಾಗೂ ಮಹಾನ್ ನಾಯಕರನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವಿಮರ್ಶಿಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ. 12ನೇ ಶತಮಾನದಲ್ಲಿಯೇ ಬಸವಣ್ಣನವರಿಗೆ ವಿರೋಧ ವ್ಯಕ್ತವಾಗಿತ್ತು. ಕಾಲ ಬದಲಾದರೂ ಅವರ ವಿಚಾರಧಾರೆಗಳನ್ನು ಹತ್ತಿಕ್ಕುವ ಪ್ರಯತ್ನಗಳು ಮುಂದುವರಿದಿವೆ. ಡಾ.ಬಿ.ಆರ್‌.ಅಂಬೇಡ್ಕರ ಅವರ ಬಗ್ಗೆಯೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಮನುವಾದಿ ವಿಚಾರಧಾರೆಗಳಿಂದ ಪ್ರೇರಿತವಾಗಿವೆ. ಇದರ ವಿರುದ್ಧ ಬೃಹತ್ ಹೋರಾಟ ಹಾಗೂ ಕಾನೂನು ಹೋರಾಟ ರೂಪಿಸಲಾಗುವುದು ಎಂದರು.ಪಾಲಿಕೆ ಸದಸ್ಯ ದಿನೇಶ ಹಳ್ಳಿ ಮಾತನಾಡಿ, ಲೇಖಕ ರವಿ ಹಂಜ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಇಂತಹ ವಿಕೃತ ಮನೋಭಾವದ ವ್ಯಕ್ತಿಯನ್ನು ಗಡಿಪಾರು ಮಾಡಬೇಕು. ದೇಶದ ಸಾಮರಸ್ಯಕ್ಕೆ ಧಕ್ಕೆ ತರುವ ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವಸಂತ ಹೊನಮೊಡೆ ಮುಂತಾದವರು ಉಪಸ್ಥಿತರಿದ್ದರು.