ಸಾರಾಂಶ
ಶಿವಮೊಗ್ಗದ ನಂಜಪ್ಪ ಬಡಾವಣೆಯಲ್ಲಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮನೆಗೆ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟದಿಂದ ಮುತ್ತಿಗೆಗೆ ಯತ್ನಸಿದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ನಂಜಪ್ಪ ಬಡಾವಣೆ ಯಲ್ಲಿರುವ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮನೆಗೆ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟದಿಂದ ಮುತ್ತಿಗೆ ಹಾಕಲಾಯಿತು.ಈ ಸಂದರ್ಭ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು. ಪ್ರತಿಭಟನಾಕಾರರು ಸಿದ್ದರಾಮಯ್ಯ ಅವರ ಭಾವಚಿತ್ರ ಹಿಡಿದು ವಿಜಯೇಂದ್ರ ಸೇರಿದಂತೆ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಹಾಗೂ ಸಿದ್ದರಾಮಯ್ಯ ಪರ ಘೋಷಣೆ ಕೂಗಿದರು.
ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕದಂತೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ಬ್ಯಾರಿಕೇಡ್ ತಳ್ಳಿ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಬಂಧಿಸಿ, ತಮ್ಮ ವಾಹನದಲ್ಲಿ ಕರೆದೊಯ್ದರು.ಈ ವೇಳೆ ಒಕ್ಕೂಟದ ಸಂಚಾಲಕ ಕೆ.ರಂಗನಾಥ್ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಮೇಲೆ ಮುಡಾದ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ, ಪಾದಯಾತ್ರೆ ನಡೆಸುತ್ತಿದ್ದಾರೆ. ಇವರ ಮೇಲೆಯೇ ಸಾಕಷ್ಟು ಆರೋಪಗಳು ಇರುವಾಗ ಯಾವುದೇ ತಪ್ಪು ಮಾಡದ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎಂ.ಶರತ್ ಪಾಲಾಕ್ಷ, ಉಮೇಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.