ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಪೊಲೀಸ್ ಕಾನ್ಸ್ಟೇಬಲ್ನಿಂದ ಹಿಡಿದು ಐಜಿಪಿವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆ ಸದಾ ಸ್ಮರಣೀಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉದ್ಭವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವುದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ ಎಂದರು.
ನಿವೃತ್ತರಾಗಿರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಗೌರವಿಸುವುದಸುವುದಕ್ಕಾಗಿಯೇ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನ ಆಚರಿಸಲಾಗುತ್ತದೆ. ನಿವೃತ್ತರಾದವರಿಗೆ ಸಮಸ್ಯೆಗಳೆನಾದರೂ ಇದ್ದಲ್ಲಿ ಜಿಲ್ಲಾಡಳಿತವನ್ನು ಸಂಪರ್ಕಿಸದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು. ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಸ್ತುತ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಪ್ರಮುಖವಾಗಿದೆ. ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿದಲ್ಲಿ ಸಹಜವಾಗಿ ಜನಮನ್ನಣೆ ದೊರೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಪೊಲೀಸ್ ಇಲಾಖೆಯ ವಿವಿಧ ಚಟುವಟಿಕೆಗಳ ವಾರ್ಷಿಕ ವರದಿ ವಾಚಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಂಡಿ ಗ್ರಾಮೀಣ ಠಾಣೆಯ ನಿವೃತ್ತ ಪೊಲೀಸ್ ಉಪ ನಿರೀಕ್ಷಕ ಜಿ.ಎಸ್.ಚಕ್ಕಡಿ ಅವರು ಕವಾಯತು ತಂಡಗಳ ಪರಿವೀಕ್ಷಣೆ ಹಾಗೂ ಗೌರವ ವಂದನೆ ಸ್ವೀಕರಿಸಿದರು.ಪ್ರೊಬೇಷನರಿ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಆರು ತುಕಡಿಗಳ ಆಕರ್ಷಕ ಪಥಸಂಚಲನ ನಡೆಯಿತು. ಡಿಸಿ, ಸಿಇಒ ಹಾಗೂ ಎಸ್‌ಪಿ ಸಮ್ಮುಖದಲ್ಲಿ ಪೊಲೀಸ್ ಧ್ವಜಗಳನ್ನು ಬಿಡುಗಡೆಗೊಳಿಸಿ ವಿತರಿಸಲಾಯಿತು. 2023ನೇ ಸಾಲಿನಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು ನಂತರ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಜರುಗಿಸಲಾಯಿತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಶಂಕರ ಕೆ. ಮಾರಿಹಾಳ ಸ್ವಾಗತಿಸಿದರು. ಪಿಎಸ್‌ಐ ಕೃಷ್ಣವೇಣಿ ಹಾಗೂ ಪೊಲೀಸ್ ಪೇದೆ ದಶರಥ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ರಾಮನಗೌಡ ಹಟ್ಟಿ ವಂದನಾರ್ಪಣೆ ಸಲ್ಲಿಸಿದರು.---ಕೋಟ್
ಪೊಲೀಸರು ಹಗಲು-ರಾತ್ರಿ ಲೆಕ್ಕಿಸದೇ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವರ ಸೇವೆ ಅನನ್ಯವಾಗಿದೆ. ಸಾರ್ವಜನಿಕರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಪೊಲೀಸರ ಶ್ರಮವಿದೆ. ನೊಂದವರ ಪಾಲಿಗೆ ಭರವಸೆ ಹುಟ್ಟು ಹಾಕಿ, ನಿಮ್ಮೊಂದಿಗೆ ನಾವಿದ್ದೇವೆ ಎಂಬುವುದನ್ನು ಪೊಲೀಸರ ಧ್ಯೇಯವಾಗಿದೆ.-ಟಿ. ಭೂಬಾಲನ್ ಜಿಲ್ಲಾಧಿಕಾರಿ