ಸಾರಾಂಶ
ಡೀಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ । ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ಕನ್ನಡಪ್ರಭ ವಾರ್ತೆ ಹಾಸನರೈತರು, ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರದ ವಿರುದ್ಧ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಮತ್ತು ಜನಪರ ಸಂಘಟನೆಗಳಿಂದ ಮಂಗಳವಾರ ಡೀಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್ ಕುಮಾರ್ ಮಾತನಾಡಿ, ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ. ಕೇಂದ್ರ ಸರ್ಕಾರ ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಈ ಹಿಂದೆ ವಿವಿಧ ರೈತ ಸಂಘಟನೆಗಳ ವತಿಯಿಂದ ದೆಹಲಿಯಲ್ಲಿ ನಡೆದ ಅನಿರ್ಧಿಷ್ಟಾವಧಿ ಹೋರಾಟದ ವೇಳೆ ಕೇಂದ್ರ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಕೇವಲ ಭರವಸೆ ನೀಡಿದ ಕೇಂದ್ರ ಸರ್ಕಾರ ಈವರೆಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದರು. ರೈತರ ಹಿತ ಕಾಯಬೇಕಾಗಿರುವ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಅವರನ್ನು ಜೀತದ ಆಳುಗಳನ್ನಾಗಿ ಮಾಡಿದೆ. ಆದ್ದರಿಂದ ಕೂಡಲೇ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆದು ರೈತರ ಪರ ಕಾನೂನು ಹಾಗೂ ಮಸೂದೆಗಳನ್ನು ಜಾರಿಗೆ ತರಬೇಕು ಎಂಬ ನಿಟ್ಟಿನಲ್ಲಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಎಲ್ಲಾ ರೀತಿಯ ಬೆಳೆಗಳಿಗೆ ಕಾನೂನು ಬದ್ಧವಾಗಿ ಬೆಂಬಲ ಬೆಲೆ ಖಾತರಿಪಡಿಸಬೇಕು, ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಎಲ್ಲಾ ರೀತಿಯ ಕಾರ್ಮಿಕ ಗುತ್ತಿಗೆ ಅಥವಾ ಹೊರಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಕನಿಷ್ಠ ೧೦,೦೦೦ ಪಿಂಚಣಿ ನಿಗದಿ ಮಾಡಿ ರಾಷ್ಟ್ರೀಯ ವೇತನ ತಿಂಗಳಿಗೆ ೨೬,೦೦೦ ನಿಗದಿ ಮಾಡಬೇಕು, ಇದು ಕೃಷಿ ಕಾರ್ಮಿಕ ಸಂಘಟಿತ ಅಸಂಘಟಿತ ಎಲ್ಲಾ ವರ್ಗದ ಕಾರ್ಮಿಕರಿಗೆ ಅನ್ವಯಿಸುವಂತೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಸಾಲ ಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಸಮಗ್ರ ಸಾಲ ಮನ್ನಾ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಬೇಕು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡಬಾರದು. ಎಲ್ಲರಿಗೂ ಗುಣಮಟ್ಟದ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಮಾಜದಲ್ಲಿ ಕೋಮು ವಿಭಜನೆಯನ್ನು ನಿಲ್ಲಿಸಲು ಮತ್ತು ಅವುಗಳ ಪರಿಣಾಮಕಾರಿ ಅನುಷ್ಠಾನಗೊಳ್ಳಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು, ಮಹಿಳಾ ಸಬಲೀಕರಣ ಮತ್ತು ತ್ವರಿತ ನ್ಯಾಯಾಂಗ ವ್ಯವಸ್ಥೆ ಮೂಲಕ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಬೇಕು. ಜಾತಿ ಹಾಗೂ ಕೋಮು ತಾರತಮ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪ, ಅರವಿಂದ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಎಚ್.ಆರ್. ನವೀನ್ ಕುಮಾರ್, ಎಚ್.ಎಸ್. ಮಂಜುನಾಥ್, ರಾಜ್ಯ ರೈತ ಸಂಘದ ವಾಜಿದ್, ರವಿ, ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಂಚಾಲಕರಾದ ಎಂ.ಜಿ.ಪೃಥ್ವಿ, ಎಸ್.ಎಫ್.ಐ. ಜಿಲ್ಲಾ ಕಾರ್ಯದರ್ಶಿ ವಿ. ರಮೇಶ್ ಇತರರು ಇದ್ದರು.