ನಾಟಕಗಳ ಮೂಲಕವೇ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ರಂಗಭೂಮಿಗೆ ಇಂದು ಜನತೆ ಹೆಚ್ಚಿನ ಪ್ರೋತ್ಸಾಹ, ಉತ್ತೇಜನ ನೀಡುವ ಅಗತ್ಯವಿದೆ ಎಂದು ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.

ಉಡುಪಿ : ನಾಟಕಗಳ ಮೂಲಕವೇ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ರಂಗಭೂಮಿಗೆ ಇಂದು ಜನತೆ ಹೆಚ್ಚಿನ ಪ್ರೋತ್ಸಾಹ, ಉತ್ತೇಜನ ನೀಡುವ ಅಗತ್ಯವಿದೆ ಎಂದು ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.

ಅಂಬಲಪಾಡಿ ದೇವಳದ ಬಯಲು ರಂಗಮಂದಿರದಲ್ಲಿ ಕನ್ನಡ - ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಂಗಭೂಮಿ ಉಡುಪಿ ವತಿಯಿಂದ ದಿ.ನಿ.ಬೀ. ಅಣ್ಣಾಜಿ ಬಲ್ಲಾಳ ಸ್ಮರಣಾರ್ಥ ‘ಅಂಬಲಪಾಡಿ ನಾಟಕೋತ್ಸವ’ ಉದ್ಘಾಟಿಸಿ ಮಾತನಾಡಿದರು.ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿಕೊಂಡು, ಸಶಕ್ತವಾಗಿ ಬೆಳೆದಿರುವ ರಂಗಭೂಮಿ ಉಡುಪಿಯನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅವರ ತಂಡ ಅಭಿನಂದನಾರ್ಹರು ಎಂದವರು ಶ್ಲಾಘಿಸಿದರು.ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ, ರಂಗಕಲೆ ನಿಂತ ನೀರಾಗಬಾರದು, ಅದರಲ್ಲಿ ಯುವಜನತೆ ತೊಡಗಿಕೊಳ್ಳಬೇಕು ಎನ್ನುವ ಸದುದ್ದೇಶದಿಂದ 15ಕ್ಕೂ ಹೆಚ್ಚಿನ ಶಾಲೆಗಳಲ್ಲಿ ರಂಗಶಿಕ್ಷಣ ಪ್ರಾರಂಭಿಸಲಾಗಿದೆ. ಮುಂದೆ ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುವ ಚಿಂತನೆ ಇದೆ ಎಂದರು.ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ‘ಅಂಬಾತನಯ ಮುದ್ರಾಡಿ ಸಂಸ್ಮರಣಾ ಪುಸ್ತಕ ಪ್ರಶಸ್ತಿ’ಯನ್ನು ಹಿರಿಯ ಪತ್ರಕರ್ತ ಗಣೇಶ್ ಅಮೀನಗಢ ಅವರಿಗೆ ಪ್ರದಾನ ಮಾಡಲಾಯಿತು.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಅನಿತಾ ಪ್ರಭಾತ್ ಶುಭ ಹಾರೈಸಿದರು.ರಂಗಭೂಮಿ ಉಡುಪಿಯ ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು, ಎನ್.ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪಚಂದ್ರ ಕುತ್ಪಾಡಿ, ವಿಜಯ ಕುಮಾರ್ ಮುದ್ರಾಡಿ ಇದ್ದರು.

ಸಂಘಟನಾ ಕಾರ್ಯದರ್ಶಿ ಗಿರೀಶ್ ತಂತ್ರಿ ಸ್ವಾಗತಿಸಿ, ಪ್ರಭಾಕರ ತುಮರಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೀನಾಸಂ ತಿರುಗಾಟ ತಂಡದಿಂದ ‘ಪಾದುಕಾ ಕಿರೀಟ’ ನಾಟಕ ಪ್ರದರ್ಶನಗೊಂಡಿತು.