ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಥೀಂ ಪಾರ್ಕ್‌ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡಪ್ರಭವಾರ್ತೆ ಕಾರ್ಕಳ

ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಥೀಂ ಪಾರ್ಕ್‌ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಇದನ್ನು ಕಾರ್ಕಳದ ಇತಿಹಾಸದಲ್ಲೇ ಒಂದು ದುರ್ದಿನ ಎಂದು ಕರೆದಿದ್ದಾರೆ. ಕ್ಷೇತ್ರವನ್ನು ರಾಜ್ಯದ ಶ್ರೇಷ್ಠ ಪ್ರವಾಸಿ ತಾಣವಾಗಿ ರೂಪಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಿದ ಪರಶುರಾಮ ಥೀಂ ಪಾರ್ಕ್ ಯೋಜನೆ, ಸ್ಥಳೀಯ ಕಾಂಗ್ರೆಸ್ ನಾಯಕರ ದ್ವೇಷ ಹಾಗೂ ಅಸೂಯೆಯ ರಾಜಕಾರಣಕ್ಕೆ ಬಲಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.ಕಳೆದ ಎರಡು ವರ್ಷಗಳಿಂದ ಯೋಜನೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗದಂತೆ ತಡೆಯಲಾಗಿದೆ. ಇದರ ಪರಿಣಾಮ ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಭೇಟಿ ನೀಡಬೇಕಿದ್ದ ಈ ಥೀಂ ಪಾರ್ಕ್ ಇಂದು ಪಾಳುಬಿದ್ದ ಸ್ಥಿತಿಗೆ ತಲುಪಿದ್ದು, ಕಳ್ಳರು ನುಗ್ಗಿ ಮೇಲ್ಛಾವಣಿಯನ್ನೇ ಕದ್ದೊಯ್ಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಹಿಂದೆ ಕಾರ್ಕಳಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಯೋಜನೆಯನ್ನು ಮುಂದಿನ ಚುನಾವಣೆಯವರೆಗೂ ಜೀವಂತವಾಗಿ ಇಡುವಂತೆ ಕಾಂಗ್ರೆಸ್ ಪಾಳಯಕ್ಕೆ ಸೂಚನೆ ನೀಡಿದ್ದರು ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ.

ಘಟನೆಯಲ್ಲಿ ಜಿಲ್ಲಾಡಳಿತದ ವೈಫಲ್ಯವೂ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಶಾಸಕರು ಆರೋಪಿಸಿದ್ದಾರೆ. ಸೆಪ್ಟೆಂಬರ್ 2023ರಲ್ಲಿ ಥೀಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರಾಕರಿಸಿ ಸ್ಥಳೀಯ ಆಡಳಿತ ಆದೇಶ ಹೊರಡಿಸಿದ್ದರೂ, ಕೆಲವರು ಕಾನೂನು ಬಾಹಿರವಾಗಿ ಒಳನುಗ್ಗಿ ವಿಡಿಯೋ ಚಿತ್ರೀಕರಣ ನಡೆಸಿದ್ದರು. ಈ ಎಲ್ಲದರ ನಡುವೆ ಕಳ್ಳತನ ನಡೆದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.ಈ ಹಿನ್ನೆಲೆಯಲ್ಲಿ ಕಳ್ಳತನ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವ ಜತೆಗೆ, ಕಾನೂನು ಬಾಹಿರವಾಗಿ ವಿಡಿಯೋ ಚಿತ್ರೀಕರಣ ನಡೆಸಿದವರನ್ನೂ ವಿಚಾರಣೆಗೆ ಒಳಪಡಿಸಬೇಕೆಂದು ವಿ. ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಕಾರ್ಕಳದ ಪ್ರವಾಸೋದ್ಯಮಕ್ಕೆ ಹಾನಿ ಮಾಡಿದವರನ್ನು ಇತಿಹಾಸ ಕ್ಷಮಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.