ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದಲಿತ ವಿರೋಧಿ ನೀತಿ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದರ ಜೊತೆಗೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಗಳಲ್ಲಿ ಗೆದ್ದು ಬಿಜೆಪಿ ಬಾವುಟವನ್ನು ಹಾರಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ ಹೇಳಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಅತಿದೊಡ್ಡ ಪಕ್ಷ, ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಭಾರತೀಯ ಜನತಾ ಪಕ್ಷದ ಪ್ರಧಾನಿ ಮೋದಿ 3ನೇ ಬಾರಿ ಪ್ರಧಾನಿಯಾಗುವುದರ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದು ನಮಗೆ ಹೆಮ್ಮೆತರುವ ವಿಚಾರ ಎಂದರು.ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿ, ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ್ತು ಸಚಿವರು ಜನಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವ ಬದಲು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದರು.ಅಹಿಂದ ಹೆಸರಿನಿಂದ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ದಲಿತರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸುವ ಮೂಲಕ ಆ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಇಂಥವರ ವಿರುದ್ಧ ನಮ್ಮ ಹೋರಾಟ ನಿರಂತವಾಗಿರುತ್ತದೆ ಎಂದರು. ವಾಲ್ಮೀಕಿ ಹಗರಣ, ಮುಡಾ ಹಗರಣ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಕ್ರಮವಾಗಿ ಕುಟುಂಬದ ಸದಸ್ಯರೇ ನಿವೇಶನ ಪಡೆದುಕೊಂಡು ಸಾವಿರಾರು ಕೋಟಿ ರು.ಗಳ ಭ್ರಷ್ಟಾಚಾರ ಮಾಡಿದ್ದಾರೆ. ಸ್ವಪಕ್ಷೀಯ ಶಾಸಕರಿಗೆ ಸರ್ಕಾರದ ಬಗ್ಗೆ ಆತ್ಮಾಭಿಮಾನ ಇಲ್ಲ. ಕ್ಷೇತ್ರದ ಅಭಿವೃದ್ಧಿಗಳಿಗೆ ಅನುದಾನ ನೀಡುತ್ತಿಲ್ಲ. ಈ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಗೆದ್ದಿರುವ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದರು.ದಲಿತರು ಹಾಗೂ ಬಡವರ ಪರವಾಗಿ ಈ ಸರ್ಕಾರ ಇಲ್ಲ. ಇದರ ವಿರುದ್ಧ ಸಂಘಟನಾತ್ಮಕವಾಗಿ ಹೋರಾಟ ಮಾಡಿ, ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸಲು ಶ್ರಮಿಸೋಣ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮಾತನಾಡಿ, ರಾಜ್ಯದಲ್ಲಿರುವ ಸಿದ್ಧರಾಮಯ್ಯ ಸರ್ಕಾರ ಸಂವಿಧಾನ ಹಾಗೂ ದಲಿತ ವಿರೋಧಿ ಸರ್ಕಾರವಾಗಿದೆ. ನಮ್ಮ ಸರ್ಕಾರ ಇದ್ದಾಗ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ಸಿಗರು ಈಗ ತಮ್ಮ ಅವಧಿಯಲ್ಲಿ ಆ ಸಮುದಾಯದ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ದಲಿತರ ಬೀದಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿಗೆ ಮತ ಹಾಕಬೇಡಿ. ಸಂವಿಧಾನ ಬದಲಿಸುತ್ತಾರೆ ಎಂಬ ಅಪಪ್ರಚಾರ ಮಾಡಿದರು. ಆದರೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99ಕ್ಕಿಂತ ಹೆಚ್ಚು ಸೀಟು ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದರು.ನಿಜವಾದ ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿ ಕಾಂಗ್ರೆಸ್. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 124 ಕ್ಷೇತ್ರ ಹಾಗೂ ಜೆಡಿಎಸ್‌ನ 18 ಕ್ಷೇತ್ರ ಸೇರಿ, 147 ಕ್ಷೇತ್ರಗಳಲ್ಲಿ ಲೀಡ್‌ಕೊಟ್ಟಿದೆ. ಇದು ರಾಜ್ಯದ ಮತದಾರರು ಕಾಂಗ್ರೆಸ್‌ಗೆ ನೀಡಿರುವ ಎಚ್ಚರಿಕೆ ಎಂದರು.2028ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬುದಕ್ಕೆ ಇದು ದಿಕ್ಸೂಚಿಯಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಸಂಘಟಿಸುವ ಮೂಲಕ ನಾಲ್ಕು ಕ್ಷೇತ್ರವನ್ನು ಗೆಲ್ಲುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ. ಚಾಮರಾಜನಗರ ಜಿಲ್ಲೆ ಎಂದರೆ ಬಿಜೆಪಿ ಭದ್ರಕೋಟೆ ಎಂಬ ಅಭಿಪ್ರಾಯ ಎಲ್ಲಸ್ತರದ ಜನರಲ್ಲಿ ಮೂಡಬೇಕು. ಮುಂಬರುವ ಜಿಪಂ, ತಾಪಂ ಚುನವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯುವ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರ ಪತನಕ್ಕೆ ನಮ್ಮ ಜಿಲ್ಲೆಯಿಂದಲೇ ನಾಂದಿ ಹಾಡೋಣ ಎಂದರು.ರಾಜ್ಯ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಮತ್ತು ಚಾಮರಾಜನಗರ ರೈಲು ಯೋಜನೆಗಳನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಎಸ್. ಬಾಲರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ರಾಷ್ಟ್ರೀಯ ಹಿಂದುಳಿದ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ, ಡಾ.ಎ.ಆರ್. ಬಾಬು, ಮಾಜಿ ಅಧ್ಯಕ್ಷರಾದ ಸುಂದರ್, ನಾರಾಯಣ ಪ್ರಸಾದ್, ಜಿಪಂ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಯಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ ಹಾಗೂ ಪಕ್ಷದ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಇದ್ದರು.