ದೊಡ್ಡಬಳ್ಳಾಪುರ: ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ ಪಡೆದುಕಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ ಭೀಮಸೇನ ಬಾಗಡಿ ಹೇಳಿದರು.

ದೊಡ್ಡಬಳ್ಳಾಪುರ: ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ ಪಡೆದುಕಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ ಭೀಮಸೇನ ಬಾಗಡಿ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಳಾ ಸಬಲೀಕರಣ ಘಟಕ ಇವರ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಈಗಲೂ ಕೂಡ ಸಮಾಜದ ಮೂಖ್ಯವಾಹಿನಿಗೆ ಬರಲು ಹಿಂಜರಿಯುತ್ತಾರೆ. ಹೆಣ್ಣು ಮಕ್ಕಳಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಸಂಸತ್ ನಲ್ಲಿ ಶೇ.33ರಷ್ಟು ಮೀಸಲಾತಿ ಇದೆ, ಪಂಚಾಯಿತಿಗಳಲ್ಲಿ ಇದೆ, ಆದರೆ ಈಗಲೂ ಕೂಡ ಪಂಚಾಯಿತಿಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವತಂತ್ರ ಸಿಕ್ಕಿಲ್ಲ ಎಂದು ತಿಳಿಸಿದರು.

ಗ್ರಾಮಗಳಲ್ಲಿ ಇನ್ನೂ ಕೂಡ ಅನಿಷ್ಟ ಪದ್ದತಿಗಳು ಆಚರಣೆಯಲ್ಲಿವೆ, ಬಾಲ್ಯ ವಿವಾಹ, ಬಾಲ್ಯದಲ್ಲಿ ಗರ್ಭವತಿ, ಭ್ರೂಣ ಹತ್ಯೆ, ಮಕ್ಕಳ ಬಲಿ ಕೊಡುವುದು ಇವೆಲ್ಲವು ಕೂಡ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು. ಭ್ರೂಣ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದರೂ ಸಹ ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವರು. ಕಾನೂನಿನ ಮೂಲಕ ತಪ್ಪಿತಸ್ತರಿಗೆ ಶಿಕ್ಷೆ ಆಗುವುದು ಖಚಿತ. ಸಾರ್ವಜನಿಕರು ಇಂತಹ ಘಟನೆಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಪೊಲೀಸ್‌ ಠಾಣೆಗಳಿಗೆ ಮಾಹಿತಿ ನೀಡಬೇಕು. ಇದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವೆಂದು ಭಾವಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮಾತನಾಡಿ, ದೇಶದ ಸ್ವಾತಂತ್ರ್ಯ, ಸಮಾನತೆ ಪ್ರತಿಯೊಬ್ಬ ಹೆಣ್ಣು ಮಗುವಿಗೂ ಸಿಗಬೇಕು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಅಧಿಕಾರಿಗಳು ಸದಾ ಕಾರ್ಯಪ್ರವೃತ್ತರಾಗಬೇಕು. ಸಾರ್ವಜನಿಕರು ಕೂಡ ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ನೀಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು. ಸಾರ್ವಜನಿಕ ಸ್ಥಳಗಳು, ನೆರೆಹೊರೆ, ಶಾಲಾ ಕಾಲೇಜುಗಳಲ್ಲಿ ಎಲ್ಲೇ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ದೈಹಿಕ-ಮಾನಸಿಕ ಹಿಂಸೆ ತಿಳಿದು ಬಂದಲೂ ಕೂಡಲೇ ಶಿಕ್ಷಕರು, ಮನೆಯಲ್ಲಿ ಪೋಷಕರು, ಸಹಾಯವಾಣಿಗಳಿಗೆ ನಿರ್ಭಯವಾಗಿ ತಿಳಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮಿ, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋಟ್‌.........

ಸರ್ಕಾರಿ ನೌಕರರಾದ ನಾವು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು, ಅವರ ರಕ್ಷಣೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವಂತ ಕೆಲಸ ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ ಹೆಣ್ಣು ಮಕ್ಕಳಿಗೆ ಇರುವಂತಹ ಕಾಯ್ದೆ, ಕಾನೂನು, ಸೌಲಭ್ಯಗಳ ಬಗ್ಗೆ ಅರಿತುಕೊಂಡು ಮಹಿಳೆಯರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ.

-ಶ್ರೀಶೈಲ ಭೀಮಸೇನ ಬಾಗಡಿ, ಹಿರಿಯ ಸಿವಿಲ್ ನ್ಯಾಯಾಧೀಶರು

23ಕೆಡಿಬಿಪಿ1-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಮಹಿಳೆಯರು-ಮಕ್ಕಳ ಅನೈತಿಕ ಸಾಗಾಣಿಕೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.