ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಮಾಜಿ ಸಚಿವರಿಗೆ ಈ ರೀತಿಯ ಪರಿಸ್ಥಿತಿ ಆದರೆ ಸಾಮಾನ್ಯ ಜನರ ಗತಿ ಏನು? ಸಾಮಾನ್ಯ ಜನರು ಪೊಲೀಸ್ ಠಾಣೆಗೆ ಹೋಗಿ ಏನಾದದರೂ ಒಂದು ಅರ್ಜಿ ಕೊಟ್ಟರೆ ಪೊಲೀಸರು ಅದನ್ನು ಸ್ವೀಕಾರ ಮಾಡುತ್ತಾರಾ. ಅವರಿಗೆ ನ್ಯಾಯ ಕೊಡುತ್ತಾರಾ ಎಂಬುದು ಮೂಲಭೂತವಾದ ಪ್ರಶ್ನೆಯಾಗಿದೆ. ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಿದ್ದು, ಜನರು ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತ ಪಡಿಸಿದರು.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದದಿಂದ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಶುಕ್ರವಾರ ಬಿಜೆಪಿ ಕಚೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಜೀವ ಮಠಂದೂರು. ಅವರು ತುರ್ತು ಪರಿಸ್ಥಿತಿಯ ಸ್ಥಿತಿಯು ಇದೀಗ ರಾಜ್ಯದಲ್ಲಿ ಮರುಕಳಿಸಿದೆ. ಸಿ.ಟಿ. ರವಿ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ರಾಜ್ಯದ ಒಬ್ಬ ಜವಾಬ್ದಾರಿಯುತ ಹಿರಿಯ ಶಾಸಕನ ಮೇಲೆ ಸರಕಾರ ಗೂಂಡಾ ರೀತಿಯಲ್ಲಿ ಕ್ರಮ ಕೈಗೊಂಡಿದೆ ಇದಕ್ಕೆ ಬಿಜೆಪಿ ತಕ್ಕ ಉತ್ತರ ಕೊಡಲಿದೆ ಎಂದರು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವ ಕುಮಾರ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಪ್ರಭು, ಅನಿಲ್ ತೆಂಕಿಲ, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಮುಖಂಡರಾದ ಪುರುಷೋತ್ತಮ ಮುಂಗ್ಲಿಮನೆ, ವಿರೂಪಾಕ್ಷ ಭಟ್ ಮಚ್ಚಿಮಲೆ, ಎಸ್. ಅಪ್ಪಯ್ಯ ಮಣಿಯಾಣಿ ಚಂದ್ರಶೇಖರ್ ರಾವ್ ಬಪ್ಪಳಿಗೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.