ಹಾವೇರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ಹರಿದಾಡುತ್ತಿರುವ ಸುದ್ದಿಗಳು ''''''''ವಾಟ್ಸಾಪ್ ಯುನಿವರ್ಸಿಟಿ''''''''ಯ ಸೃಷ್ಟಿಯಾಗಿದ್ದು, ಅಂತಹ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ರಾಜ್ಯಸಭೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮರು ಆಯ್ಕೆ ಕುರಿತು ಪಕ್ಷದ ಉನ್ನತ ನಾಯಕರು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳು, ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಗಳ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಯುದ್ಧ ಪರಿಸ್ಥಿತಿ ಉಂಟಾಗಿರುವುದರಿಂದ ಸಮಸ್ಯೆಗಳು ಎದುರಾಗಿವೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಬೇರೆ ರೀತಿಯಲ್ಲಿ ಹೊಂದಾಣಿಕೆ ಮಾಡಲಾಗುತ್ತಿದೆ. ಆದರೆ ಅಡುಗೆ ಅನಿಲದ ಬಹುಪಾಲು ಮಧ್ಯ ಪ್ರಾಚ್ಯದ ದೇಶಗಳಿಂದಲೇ ಬರಬೇಕಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಆದರೂ ಸಿಲಿಂಡರ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳು ಪೆಟ್ರೋಲಿಯಂ ಉಪ ಉತ್ಪನ್ನಗಳಾಗಿವೆ. ರಷ್ಯಾ, ಮೊರಾಕ್ಕೊ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಇವುಗಳ ಪೂರೈಕೆ ನಡೆಯುತ್ತಿದ್ದು, ಯುದ್ಧದ ಪರಿಣಾಮವಾಗಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಮಸ್ಯೆಗಳು ಎದುರಾಗಿವೆ ಎಂದರು. ಸಚಿವ ಸ್ಥಾನಕ್ಕಾಗಿ ನಮ್ಮ ಹೆಸರು ಬಳಕೆ: ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಿರುಕುಳ ನೀಡುತ್ತಿದ್ದಾರೆ ಎಂಬ ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಿರುಕುಳ ಎಂಬ ಪದವೇ ನಮ್ಮ ಡಿಕ್ಷನರಿಯಲ್ಲಿ ಇಲ್ಲ. ಕೆಲವರು ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಮ್ಮ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ವಾಟ್ಸಾಪ್ ಯುನಿವರ್ಸಿಟಿ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ-ಸಂಸದ ಬೊಮ್ಮಾಯಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ಹರಿದಾಡುತ್ತಿರುವ ಸುದ್ದಿಗಳು ''ವಾಟ್ಸಾಪ್ ಯುನಿವರ್ಸಿಟಿ''ಯ ಸೃಷ್ಟಿಯಾಗಿದ್ದು, ಅಂತಹ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.