ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ

| Published : Jul 19 2024, 12:46 AM IST

ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಗಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಬಗ್ಗೆ ಯಾವುದೇ ಆತಂಕ ಬೇಡ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆಆರ್‌ಎಸ್‌ನಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷಿ ಸಚಿವರು ಸಹ ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಸಜ್ಜಾಗಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಗಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆಆರ್‌ಎಸ್‌ನಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷಿ ಸಚಿವರು ಸಹ ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಸಜ್ಜಾಗುವಂತೆ ಸೂಚಿಸಿದರು.

ಶುಕ್ರವಾರ (ಜು.19)ದಿಂದ ಜಿಲ್ಲೆಯ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಬೇಕು. ರೈತರಿಗೆ ಅನುಕೂಲವಾಗುವಂತೆ ಬೆಳಗ್ಗೆ 8 ಗಂಟೆಗೆ ಖರೀದಿ ಕೇಂದ್ರ ತೆರೆಯಬೇಕು ಎಂದರು.

ದಾಸ್ತಾನು ವಿವರ ಪ್ರಕಟಿಸಿ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘ, ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಬೇಕು. ದಾಸ್ತಾನು ‌ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿವರವನ್ನು ಪ್ರಕಟಿಸಿ ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಮನವರಿಕೆ ಮಾಡಿಕೊಡುವಂತೆ ನಿರ್ದೇಶನ ನೀಡಿದರು.

ತಹಸೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿ. ಪ್ರತಿ ದಿನ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ರೈತರಿಗೆ ಅಗತ್ಯ ಮಾಹಿತಿ ಒದಗಿಸಿ ಸೌಹಾರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಬಿತ್ತನೆ ಬೀಜಗಳ ಮೊಳಕೆ ಒಡೆಯುವ ಪರೀಕ್ಷೆಗಳನ್ನು ಕಡ್ಡಾಯವಾಗಿ ಇಲಾಖೆ ನೀಡಿರುವ ಸೂಚನೆಗಳಂತೆ ಅಧಿಕಾರಿಗಳು ನಡೆಸಬೇಕು. 2024-25ನೇ ಸಾಲಿನ ಪೂರ್ವ ಮುಂಗಾರಿಗೆ ಸಂಬಂಧಿಸಿದಂತೆ 14,60,913 ತಾಲೂಕುಗಳ ಬೆಳೆ ಸಮೀಕ್ಷೆ ನಡೆಸಬೇಕಿದ್ದು, 6,87,535 ತಾಲೂಕುಗಳ ಬೆಳೆ ಸಮೀಕ್ಷೆ ನಡೆಸಿ ಶೇ.47.06 ಸಾಧನೆಯಾಗಿದೆ. ಬೆಳೆ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಿ ಒಂದು ವಾರದೊಳಗೆ ಶೇ.100 ರಷ್ಡು ಸಾಧನೆಯಾಗಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಕೃಷಿ ಅಧಿಕಾರಿಗಳು ರೈತರಿಗೆ ಹಸಿರು, ಜೈವಿಕ ಹಾಗೂ ರಾಸಾಯನಿಕ ಗೊಬ್ಬರಗಳ ಬಳಕೆಯ ಉಪಯುಕ್ತತೆಯ ಬಗ್ಗೆ ಅರಿವು ಮೂಡಿಸಿ ಹೆಚ್ಚು ಬಳಸುವಂತೆ ಪ್ರೇರೇಪಿಸಬೇಕು ಎಂದು ನುಡಿದರು.

ಜಿಲ್ಲೆಯಲ್ಲಿ 9996 ಕ್ವಿಂಟಲ್ ಬೇಡಿಕೆ ಇದ್ದು, 10764 ಕ್ವಿಂಟಲ್ ಭತ್ತ ದಾಸ್ತಾನು ಇದೆ. ರಾಗಿ 985 ಕ್ವಿಂಟಲ್ ಬೇಡಿಕೆ ಇದ್ದು, 1538 ಕ್ವಿಂಟಲ್ ದಾಸ್ತಾನು ಇದೆ. ವಿವಿಧ ರಸಗೊಬ್ಬರ ಒಟ್ಟು 54,844 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಅಶೋಕ್ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ಕೃಷಿ ಇಲಾಖೆ ಉಪನಿರ್ದೇಶಕರಾದ ಮಾಲತಿ, ಮಮತಾ ಇತರರಿದ್ದರು.