ಸಾರಾಂಶ
ಎಸ್ಸಿ, ಎಸ್ಟಿ ದೌರ್ಜನ್ಯ ತಡೆಗಟ್ಟುವ ಕುರಿತು ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲೆಯಲ್ಲಿ ಗ್ರಾಮ ಮಟ್ಟದಿಂದ ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಗಟ್ಟುವ ಕುರಿತು ದಲಿತ ಮುಖಂಡರು, ಕಂದಾಯ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯಬಾರದು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದಿದ್ದೇನೆ.ಜಿಲ್ಲೆಯಲ್ಲಿ 2021ರಲ್ಲಿ 50, 2022ರಲ್ಲಿ 64, 2023ರಲ್ಲಿ 41 ಹಾಗೂ 2024ರ ಡಿಸೆಂಬರ್ ವರೆಗೆ 61 ಪ್ರಕರಣಗಳು ವರದಿಯಾಗಿವೆ. ಎಸ್.ಸಿ. ಹಾಗೂ ಎಸ್.ಟಿ ಜನಾಂಗದವರ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಅವಶ್ಯಕತೆಯಿದೆ. ಜಿಲ್ಲೆಯ ವಿವಿಧ ಸಂಘಟನೆಗಳು ಸಭೆ ಮಾಡುವಂತೆ ನನಗೆ ಕೇಳಿಕೊಂಡಿದ್ದರು. ಹಾಗಾಗಿ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ದಲಿತ ಮುಖಂಡರ ಅಭಿಪ್ರಾಯಗಳನ್ನು ಪಡೆಯಲು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಈ ಸಭೆ ನಡೆಸಿದ್ದೇನೆ. ತಾವು ನೀಡುವ ಸಲಹೆಗಳಿಂದ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಅನುಕೂಲವಾಗುತ್ತದೆ ಎಂದರು.
ದಲಿತರ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆಗಬಾರದು. ದೌರ್ಜನ್ಯ ಪ್ರಕರಣಗಳಲ್ಲಿ ಕೊಲೆ ನಡೆಯುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ದೌರ್ಜನ್ಯ ನಡೆಯದಂತೆ ಗ್ರಾಮ ಮಟ್ಟದಿಂದ ಜಾಗೃತಿ ಮೂಡಿಸುವ ಅಗತ್ಯವಿದೆ. ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಪ್ರತಿ ತಿಂಗಳು 2ನೇ ಭಾನುವಾರದಂದು ಒಂದು ಗ್ರಾಮ ಪಂಚಾಯಿತಿ ಅಥವಾ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಎಲ್ಲಾ ಸಮುದಾಯದವರನ್ನು ಕರೆದು ಸಭೆ ನಡೆಸಬೇಕು. ಎಸ್ಸಿ, ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವಿನಃ ಕಾರಣ ವಿಳಂಬ ಮಾಡಬಾರದು. ಒಂದು ವೇಳೆ ವಿಳಂಬ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವದು ಎಂದು ಹೇಳಿದರು.ಅಸ್ಪೃಶ್ಯತೆ ಆಚರಣೆ ಮಾಡದಂತೆ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿ ಹೇಳಬೇಕು. ಸ್ವಾತಂತ್ರ್ಯ ಸಿಕ್ಕು 70 ವರ್ಷಗಳಾದ್ದರೂ ಇನ್ನೂ ಅಸ್ಪೃಶ್ಯತೆ ಜಾರಿಯಲ್ಲಿರುವುದು ವಿಷಾದನೀಯ ಸಂಗತಿಯಾಗಿದೆ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಜನರಲ್ಲಿ ಬರಬೇಕು. ದೌರ್ಜನ್ಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.ಸಂಸದ ಕೆ.ರಾಜಶೇಖರ ಹಿಟ್ನಾಳ ಮಾತನಾಡಿ, ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಆಯಾ ಗ್ರಾಮದ ಎಲ್ಲಾ ಸಮಾಜದ ಮುಖಂಡರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳ ಶಾಂತಿ ಸಭೆ ನಡೆಸುವುದರ ಜೊತೆಗೆ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ. ಆಯಾ ಗ್ರಾಮದ ಮುಖಂಡರಿಗೆ ಅಲ್ಲಿಯ ಸಮಸ್ಯೆಗಳ ಗಮನಕ್ಕೆ ಬಂದಾಗ ಮುಂದೆ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಾಜದ ಮುಖಂಡರು ಜಿಲ್ಲೆಯಲ್ಲಿ ನಡೆದ ದೌರ್ಜನ್ಯ ಪ್ರಕರಣಗಳ ಮಾಹಿತಿಯನ್ನು ಸಚಿವರ ಗಮನಕ್ಕೆ ತರುವುದರ ಜೊತೆಗೆ ಅವುಗಳ ತಡೆಗೆ ಸಲಹೆ ನೀಡಿದರು. ಎಲ್ಲರ ಸಲಹೆ ಆಲಿಸಿದ ಸಚಿವರು ಇಂತಹ ಪ್ರಕರಣಗಳು ಮುಂದೆ ಜಿಲ್ಲೆಯಲ್ಲಿ ನಡೆಯದಂತೆ ಸಂಬಂಧಿಸಿದ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.
ಸಂವಿಧಾನದ ಪೀಠಿಕೆ ಓದುವ ಮೂಲಕ ಸಭೆ ಆರಂಭಿಸಲಾಯಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರರು, ಪೊಲೀಸ್ ಠಾಣೆಗಳ ಸಿಪಿಐಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಮುಖಂಡರು ಇತರರಿದ್ದರು.