ಕನ್ನಡಪ್ರಭ ವಾರ್ತೆ ಬಾಗಲಕೋಟೆಪ್ರತಿಯೊಂದು ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರತಿಯೊಂದು ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವುದು ಹಾಗೂ ನಿಗದಿತ ಗುರಿಗಳನ್ನು ಸಮಯಕ್ಕೆ ಸರಿಯಾಗಿ ಸಾಧಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದರು.

ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ, ತೆರಿಗೆ ಸಂಗ್ರಹಣೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತಾ ಕಾರ್ಯಗಳು, ಮಹಾತ್ಮ ಗಾಂಧಿ ನರೇಗಾ ಯೋಜನೆ, ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಇತರೆ ಪ್ರಮುಖ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬವನ್ನು ಸಹಿಸಲಾಗುವುದಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ಎಲ್ಲಾ ಇಒ ಹಾಗೂ ಪಿಡಿಒಗಳು ಕ್ಷೇತ್ರಮಟ್ಟದಲ್ಲಿ ನಿಯಮಿತವಾಗಿ ಭೇಟಿ ನೀಡಿ, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಸಮಯೋಚಿತವಾಗಿ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯಿತಿ ತೆರಿಗೆ ಪ್ರಮಾಣವು ಕೇವಲ ಶೇ.15ರಷ್ಟು ಮಾತ್ರ ವಸೂಲಾತಿ ಆಗಿದ್ದು, ಇಲ್ಲಿಯವರೆಗೆ ಶೇ.25ರಷ್ಟಾದರೂ ವಸೂಲಾಗಬೇಕಿತ್ತು. ಇ-ತಂತ್ರಾಂಶದಡಿ 11ಎ ಮತ್ತು 11ಬಿ ರಡಿ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಸೂಚಿಸಿದರು. 15ನೇ ಹಣಕಾಸಿನಡಿ ಕೆಲವೊಂದು ಗ್ರಾ.ಪಂಗಳಲ್ಲಿ ಅನುದಾನ ಖರ್ಚಾಗದೇ ಹಾಗೆ ಉಳಿಸಿಕೊಂಡಿದ್ದು, ಆಗಸ್ಟ 15 ರೊಳಗಾಗಿ ನಿಯಮಾನುಸಾರ ಖರ್ಚು ಭರಿಸತಕ್ಕದ್ದು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ವಾಸಸ್ಥಳದ ದೃಢೀಕರಣ ಪತ್ರ ನೀಡಲು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಸೇರಿದಂತೆ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಗದಿಪಡಿಸಿದ ಗುರಿಗಳನ್ನು ಸಾಧಿಸಲು ವಿಫಲವಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಗುರಿ ಸಾಧನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ, ವಿಳಂಬ ಅಥವಾ ಕರ್ತವ್ಯ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಗುರಿಗಳನ್ನು ಶೇ.100 ರಷ್ಟು ಸಾಧಿಸಲು ಶ್ರಮಿಸಬೇಕು.

-ಗಜಾನನ ಬಾಲೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ