ಕನ್ನಡಪ್ರಭ ವಾರ್ತೆ ಇಂಡಿ

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಬೆಂಗಳೂರು ಕಚೇರಿಯಲ್ಲಿ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ ತಿಡಗುಂದಿ ವಿಸ್ತರಣ ಕಾಲುವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಸಭೆಯಲ್ಲಿ ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಭಾಗವಹಿಸಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಕಾಮಗಾರಿಗಳ ಗುಣಮಟ್ಟ, ಕಾರ್ಯಗತಗೊಳಿಸುವ ವೇಗ, ರೈತರಿಗೆ ದೊರೆಯಲಿರುವ ಪ್ರಯೋಜನಗಳು ಹಾಗೂ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಪರಿಶೀಲಿಸಲಾಯಿತು. ನೀರಾವರಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ರೈತರ ಹೊಲಗಳಿಗೆ ತಲುಪಿಸುವ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದೆ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಸೂಚನೆ ನೀಡಿದರು.

ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ ತಿಡಗುಂದಿ ವಿಸ್ತರಣ ಕಾಲುವೆ ಕಾಮಗಾರಿಗಳು ಪೂರ್ಣಗೊಂಡಲ್ಲಿ ಇಂಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ರೈತರಿಗೆ ಮಹತ್ತರ ಅನುಕೂಲವಾಗಲಿದ್ದು, ಕೃಷಿ ಉತ್ಪಾದನೆ ಹೆಚ್ಚಳದೊಂದಿಗೆ ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗಲಿದೆ. ಈ ಯೋಜನೆಗಳು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಸಭೆಯಲ್ಲಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣಮೂರ್ತಿ ಕುಲಕರ್ಣಿ, ಆಲಮಟ್ಟಿ ಮುಖ್ಯ ಅಭಿಯಂತರರಾದ ಬಸವರಾಜು, ಅಧೀಕ್ಷಕ ಅಭಿಯಂತರರಾದ ಗೋವಿಂದ ರಾಠೋಡ, ಕಾರ್ಯಪಾಲಕ ಅಭಿಯಂತರರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.