ಸಾರಾಂಶ
ಗದಗ: ಪಜಾ, ಪಪಂ ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಜಿಪಂ ಸಿಇಒ ಭರತ್.ಎಸ್ ಹೇಳಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಜಾ, ಪಪಂ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆ ಇರಬೇಕು.ತಾಲೂಕು ಮಟ್ಟದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯನ್ನು ನಿಯಮಿತವಾಗಿ ಜರುಗಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ಈ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಇಲಾಖಾವಾರು ಸಾಧಿಸಿದ ಪ್ರಗತಿ ವಿವರ ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ಅಪ್‌ಡೇಟ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಹಂಚಿಕೆ (ಎಸ್‌ಸಿಎಸ್‌ಪಿ) ಯೋಜನೆಯಡಿ ಅಗಸ್ಟ 2024ರ ಅಂತ್ಯದವರೆಗೆ ವಿವಿಧ ಇಲಾಖೆಗಳಡಿ ಒಟ್ಟಾರೆ ₹4453.89 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ ₹2898.34 ಲಕ್ಷ ಖರ್ಚಾಗಿದೆ. 24488 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು ಶೇ.65 ರಷ್ಟು ಪ್ರಗತಿಯಾಗಿದೆ. ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್‌ಪಿ) ಯೋಜನೆಯಡಿ ವಿವಿಧ ಇಲಾಖೆಗಳಡಿ ₹1133.54 ಲಕ್ಷ ಬಿಡುಗಡೆಯಾಗಿದ್ದು ಆ ಪೈಕಿ ₹758.50 ಲಕ್ಷ ಖರ್ಚಾಗಿದೆ. 2152 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು ಶೇ.67 ರಷ್ಟು ಪ್ರಗತಿಯಾಗಿದೆ ಎಂದು ತಿಳಿಸಿದರು.ಈ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು, ನಗರಾಭಿವೃದ್ಧಿ ಕೋಶ, ತೋಟಗಾರಿಕೆ, ಹೆಸ್ಕಾಂ, ಕೌಶಲ್ಯಾಭಿವೃದ್ಧಿ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ ಕೊಟ್ಟೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.