ರೈತರ ಭೂಮಿ ವಶಪಡಿಸಿಕೊಳ್ಳೋ ಹುನ್ನಾರ ನಡೆಸಿದೆ

| Published : Nov 05 2024, 12:32 AM IST

ಸಾರಾಂಶ

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು. ಭಾನುವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಫ್ ಮಂಡಳಿ ಲ್ಯಾಂಡ್ ಜಿಹಾದ್ ನಡೆಸುತ್ತಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಆಂದೋಲನ ನಡೆಸಲಾಗುತ್ತಿದೆ ಎಂದರು. ಸಚಿವ ಜಮೀರ್ ಅಹಮ್ಮದ್ ಅವರು ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ವಕ್ಫ್ ಅದಾಲತ್ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಇರುವುದು ಗೋಚರಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಜನತೆಯ ನೆಮ್ಮದಿಯನ್ನು ಹದಗೆಡವಲು ಹವಣಿಸುತ್ತಿದೆ. ಅಭಿವೃದ್ಧಿ ವಿಷಯಗಳ ಬಗ್ಗೆ ಗಮನ ನೀಡದೇ, ರಾಜ್ಯದಲ್ಲಿನ ಮಠ, ಮಂದಿರಗಳು ಮತ್ತು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸುತ್ತಿದೆ. 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು ಮತ್ತು ವಕ್ಫ್ ಮಂಡಳಿಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡಬೇಕು. ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡಬೇಕು ಎಂದು ತಿಳಿಸಿದರು. 2013ರಲ್ಲಿ 2 ಲಕ್ಷ ಎಕರೆಯಷ್ಟಿದ್ದ ವಕ್ಫ್ ಆಸ್ತಿ 2024 ರ ವೇಳೆಗೆ 8 ಲಕ್ಷ ಎಕರೆಗೆ ಏರಿಕೆಯಾಗಿರುವುದು ಆತಂಕಕಾರಿ ವಿಷಯ. ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಪ್ರದೇಶದ ರೈತರಿಗೆ ಹಾಗೂ ಬೀದರ್ ಜಿಲ್ಲೆಯಲ್ಲಿ ಸುಮಾರು 970 ಎಕರೆ ಪ್ರದೇಶದ ರೈತರಿಗೆ ನೋಟಿಸ್ ನೀಡಲಾಗಿದೆ. ಇದೀಗ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ, ಆರ್‌ಟಿಸಿಯಲ್ಲಿ ವಕ್ಫ್ ಎಂದು ನಮೂದು ಮಾಡಿರುವುದು ತಗೆದು ಹಾಕಬೇಕು ಎಂದು ಆಗ್ರಹಿಸಿದರು.

ನಕಲಿ ದಾಖಲೆಗಳ ಸೃಷ್ಟಿಯಲ್ಲಿ ಕಾಂಗ್ರೆಸ್ ತಲ್ಲೀನವಾಗಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ತಡೆಯಬೇಕು. ಅಭಿವೃದ್ಧಿ ವಿಷಯಗಳ ಕುರಿತು ಪ್ರಶ್ನಿಸಿದರೆ, ಕಾಂಗ್ರೆಸ್ ಸರ್ಕಾರ ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದೆ. ಮೂಡಾ ಹಗರಣ ಮತ್ತು ವಾಲ್ಮೀಕಿ ನಿಗಮ ಮಂಡಳಿ ಹಗರಣಗಳು ಬೆಳಕಿಗೆ ಬಂದ ಸಂದರ್ಭದಲ್ಲಿಯೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡಾಫೆಯಾಗಿ ವರ್ತಿಸಿದ್ದರು. ಇದೀಗ ವಕ್ಫ್ ಮಂಡಳಿ ವಿಷಯದಲ್ಲಿ ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿದೆ ಎಂದು ಕುಟುಕಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ ಉಪಸ್ಥಿತರರಿದ್ದರು.