ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಲು ಚಿಂತನೆ: ಎಸ್ಪಿ ಡಾ.ವಿ.ಜೆ.ಶೋಭಾರಾಣಿ

| Published : Jul 16 2024, 12:32 AM IST

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಲು ಚಿಂತನೆ: ಎಸ್ಪಿ ಡಾ.ವಿ.ಜೆ.ಶೋಭಾರಾಣಿ
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್‌ ಇಲ್ಲದೆಯೇ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಸಹ ಜಾಗೃತಿ ಮೂಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಕುರಿತು ಚಿಂತನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ. ಶೋಭಾರಾಣಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್‌ ಇಲ್ಲದೆಯೇ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಸಹ ಜಾಗೃತಿ ಮೂಡಬೇಕಾಗಿದೆ. ಪೊಲೀಸರ ಜೊತೆ ಸಾರ್ವಜನಿಕರು ಕೈ ಜೋಡಿಸಬೇಕು. ಹೆಲ್ಮೆಟ್ ಕಡ್ಡಾಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಬಳಿಕ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು. ಇಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಹೇಳುವುದಷ್ಟೇ ಅಲ್ಲ, ಎಲ್ಲಿ ಪಾರ್ಕಿಂಗ್ ಮಾಡಬೇಕು ಎಂಬುದು ಸಹ ಪೊಲೀಸರು ಹೇಳಬೇಕಾಗುತ್ತದೆ. ಎಲ್ಲೆಲ್ಲಿ ಪಾರ್ಕಿಂಗ್ ಮಾಡಲು ಅವಕಾಶವಿದೆ. ಎಲ್ಲಿ ಇಲ್ಲ ಎಂಬಿತ್ಯಾದಿ ಮಾಹಿತಿಯನ್ನು ಪಡೆದು, ಜನರ ಅನುಕೂಲಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಬಳ್ಳಾರಿಯಲ್ಲಿ ಸಂಚಾರಿ ನಿಯಮ ಪಾಲನೆ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣ ಸಮಸ್ಯೆ ನೀಗಿಸಲು ಪೂರಕ ಕ್ರಮಗಳತ್ತ ಗಮನ ಹರಿಸಲಾಗುವುದು. ನಗರದ ಪ್ರಮುಖ ರಸ್ತೆಗಳಲ್ಲಿನ ಪಾದಚಾರಿ ರಸ್ತೆಗಳನ್ನು ಅತಿಕ್ರಮಣ ಮಾಡಿಕೊಂಡಿರುವವರ ತೆರವುಗೊಳಿಸಲು ಸೂಚನೆ ನೀಡಲಾಗುವುದು ಎಂದು ಹೇಳಿದರು.

ಬಳ್ಳಾರಿಯಲ್ಲಿನ ಅಪರಾಧ ಪ್ರಕರಣಗಳು, ಟ್ರಾಫಿಕ್‌ ಸಮಸ್ಯೆ, ರಸ್ತೆಗಳ ಒತ್ತುವರಿಯಿಂದಾಗಿರುವ ಜನರ ಪರದಾಟ ಕುರಿತು ಪತ್ರಕರ್ತರು ಎಸ್ಪಿ ಶೋಭಾರಾಣಿ ಅವರಿಗೆ ಮಾಹಿತಿ ನೀಡಿದರು. ಮಾಧ್ಯಮದವರ ಸಲಹೆಗಳು ನನಗೆ ಬಹಳ ಮುಖ್ಯ. ನಾನು ಹೊಸದಾಗಿ ಬಂದಿದ್ದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸೇರಿದಂತೆ ಇಲಾಖೆಯಿಂದ ನೀಡಬೇಕಾದ ಸೇವೆಗಳನ್ನು ಜನರಿಗೆ ಒದಗಿಸಲಾಗುವುದು ಎಂದು ಎಸ್ಪಿ ಶೋಭಾರಾಣಿ ತಿಳಿಸಿದರು. ಹೆಚ್ಚುವರಿ ಎಸ್ಪಿ ರವಿಕುಮಾರ್ ಹಾಗೂ ನಟರಾಜ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.