ಸಾರಾಂಶ
ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಜನರೇ ಬದಲಾವಣೆ ಬಯಸಿದ್ದು ಆನಂದಸ್ವಾಮಿ ಗಡ್ಡದೇವರಮಠ ಗೆಲುವು ನಿಶ್ಚಿತ ಎಂದು ಶಾಸಕ ಬಸವರಾಜ ಶಿವಣ್ಣನವರ ಭರವಸೆ ವ್ಯಕ್ತಪಡಿಸಿದರು.
ಬ್ಯಾಡಗಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಗಳಲ್ಲಿ ಗೆದ್ದು ಅಧಿಕಾರದಲ್ಲಿದ್ದವರು ಮಾಡಿರುವ ಕೆಲಸಗಳೇನು? ಎಂಬುದು ಇದೀಗ ಚರ್ಚಿತ ವಿಷಯವಾಗಿದೆ. ಹೀಗಾಗಿ ಜನರೇ ಬದಲಾವಣೆ ಬಯಸಿದ್ದು ಆನಂದಸ್ವಾಮಿ ಗಡ್ಡದೇವರಮಠ ಗೆಲುವು ನಿಶ್ಚಿತ ಎಂದು ಶಾಸಕ ಬಸವರಾಜ ಶಿವಣ್ಣನವರ ಭರವಸೆ ವ್ಯಕ್ತಪಡಿಸಿದರು.
ತಾಲೂಕಿನ ಮೋಟೆಬೆನ್ನೂರ, ಕದರಮಂಡಲಗಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಹಮ್ಮಿಕೊಂಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದರು.ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಯೊಂದು ಘಟನೆಯನ್ನು ರಾಜಕೀಯ ಲಾಭಕ್ಕಾಗಿ ಬಿಜೆಪಿ ಬಳಕೆ ಮಾಡಿಕೊಂಡು ಭಾವನಾತ್ಮಕವಾಗಿ ಚುನಾವಣೆ ಗೆಲ್ಲಲು ತಂತ್ರ ನಡೆಸುತ್ತಿದೆ. ಆದರೆ ಜನರಿಗೆ ಬಿಜೆಪಿಯ ಇಂತಹ ಕುತಂತ್ರಗಳ ಅರಿವಿದೆ. ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ದೇಶದಲ್ಲಿ ಮೋದಿ ಅಲೆ ಇದೆ ಎಂಬುದು ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ. ಇನ್ನು ಮುಂದೆಯೂ ಸಹ ಮೋದಿ ಅವರು ಹೇಳುವ ಸುಳ್ಳುಗಳನ್ನು ಜನರು ನಂಬುವುದಿಲ್ಲ, ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪಿವೆ. ಈ ಬಾರಿ ದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು.ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಬಡವರ ಹಸಿವು ಗೊತ್ತು, ಇದೇ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ಬಡವರ ಹೊಟ್ಟೆ ತುಂಬಿಸುವ ಪುಣ್ಯದ ಕೆಲಸ ಮಾಡುತ್ತಿದ್ದಾರೆ ಎಂದರು.
ಈ ವೇಳೆ ತಾಲೂಕಾಧ್ಯಕ್ಷ ದಾನಪ್ಪ ಚೂರಿ, ಶಂಭನಗೌಡ ಪಾಟೀಲ, ಚನ್ನಬಸಪ್ಪ ಹುಲ್ಲತ್ತಿ, ನಾಗರಾಜ ಆನ್ವೇರಿ, ಮಲ್ಲಿಕಾರ್ಜುನ ಕರಿಲಿಂಗಣ್ಣನವರ ಸೇರಿದಂತೆ ಕದರಮಂಡಲಗಿ ಮೋಟೆಬೆನ್ನೂರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.