ಉಳ್ಳಾಲ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುರುವಾರ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಲ್ಲಾಪು ಜಂಕ್ಷನ್‌ನ ಸೂಪರ್ ಮಾರ್ಕೆಟ್ ಹಾಗೂ ರಸ್ತೆ ಬದಿಯಲ್ಲಿದ್ದ ಖಾಸಗಿ ಮೀನು ಮಾರುಕಟ್ಟೆ ಸೇರಿದಂತೆ ಹಲವು ಅಂಗಡಿಗಳಿಗೆ ಮೂರು ಬಾರಿ ನೋಟಿಸ್ ಜಾರಿಗೊಳಿಸಲಾಗಿತ್ತು. ನೋಟಿಸ್‌ಗೆ ಸ್ಪಂದಿಸಿ ತೆರವುಗೊಳಿಸದ ಹಿನ್ನೆಲೆಯಲ್ಲಿ ಎನ್‌ಎಚ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು.

ಈ ವೇಳೆ ವ್ಯಾಪಾರಸ್ಥರು ಒಂದು ವಾರದ ಗಡುವು ನೀಡುವಂತೆ ಮನವಿ ಮಾಡಿದರು. ಆದರೆ ಎನ್‌ಎಚ್‌ನ ಜನರಲ್ ಮ್ಯಾನೇಜರ್ (ತಾಂತ್ರಿಕ) ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಅಬ್ದುಲ್ಲಾ ಜಾವೇದ್ ಅಜ್ಮಿ ಅವರು, ಹಲವು ಬಾರಿ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ತೆರವು ಕಾರ್ಯಾಚರಣೆ ಅನಿವಾರ್ಯವಾಗಿದೆ ಎಂದು ತಿಳಿಸಿದರು. ಬಳಿಕ ವ್ಯಾಪಾರಸ್ಥರ ಮನವಿಯ ಮೇರೆಗೆ ಎರಡು ಗಂಟೆಗಳ ಕಾಲಾವಕಾಶ ನೀಡಲಾಯಿತು.

ನಂತರ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು. ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅಡ್ಡಿಯಾಗಿರುವ ಅನಧಿಕೃತ ನಿರ್ಮಾಣಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.