ಸುರೇಶ್ ಮೇಲೆ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಸುರೇಶ್ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ನಂತರ ಸಮುದಾಯದ ಎಲ್ಲಾ ವರ್ಗದ ಜನರನ್ನು ಸಂಘಟಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರವಾಸ ಮಾಡಿ ಸಂಘಟನೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಮೇಲೆ ಕೆಲವರು ಹಲ್ಲೆ ನಡೆಸಿ ಕಪ್ಪುಮಸಿ ಬಳಿದಿರುವುದನ್ನು ತಾಲೂಕು ಕುರುಬರ ಸಂಘ ಖಂಡಿಸಿದೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘದ ಉಪಾಧ್ಯಕ್ಷ ಪ್ರಪುಲ ಚಂದ್ರ, ಪದಾಧಿಕಾರಿಗಳು ಮತ್ತು ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸುರೇಶ್ ಮೇಲೆ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಸುರೇಶ್ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ನಂತರ ಸಮುದಾಯದ ಎಲ್ಲಾ ವರ್ಗದ ಜನರನ್ನು ಸಂಘಟಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರವಾಸ ಮಾಡಿ ಸಂಘಟನೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಮಂಡ್ಯ ನಗರದ ಕುರುಬರ ಸಂಘದ ಆವರಣದಲ್ಲಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅಗತ್ಯ ಅನುದಾನ ತಂದು ಸಮುದಾಯದ ಬಡ ಮಕ್ಕಳಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಮಂಡ್ಯ ಕೆರೆ ಅಂಗಳದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅಲ್ಲದೇ, ಕುರುಬರ ಸಮುದಾಯದ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ಹಾಕಿಕೊಂಡಿದ್ದಾರೆ ಎಂದು ಹೇಳಿದರು.ಸುರೇಶ್ ಅವರ ಅಭಿವೃದ್ಧಿ ಕಾರ್ಯವನ್ನು ಸಹಿಸದ ನಮ್ಮ ಜನಾಂಗದ ಕೆಲವು ಕಿಡಿಗೇಡಿಗಳು ಹಲ್ಲೇ ನಡೆಸಿ ಮಸಿ ಬಳಿದಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಪ್ರಮುಖ ಆರೋಪಿಗಳಾದ ರಾಜು, ಬೀರೇಶ್ ಸೇರಿದಂತೆ ಇತರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮನ್ಮುಲ್ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ, ತಾಪಂ ಮಾಜಿ ಸದಸ್ಯ ರಾಜಗಿರಿ, ಜಿಲ್ಲಾ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಪೂಜಾರಿ ಮಹೇಶ್, ನಿರ್ದೇಶಕ ದೇವರಹಳ್ಳಿ ಬೀರೇಶ್, ಖಜಾಂಚಿ ಜವರ ಹೆಗ್ಡೆ, ಮುಖಂಡರಾದ ಕುಮಾರ ಹೆಗ್ಗಡೆ, ಕಾಂತರಾಜು, ಮರಿಕಾಳ ಹೆಗ್ಗಡೆ, ನಾಗರಾಜು, ಮನು ಸೇರಿದಂತೆ ಹಲವು ಮುಖಂಡರು ಇದ್ದರು.