ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠಕ್ಕೆ ಚಿಂತನೆ: ಸಿದ್ದರಾಮಯ್ಯ

| Published : Sep 25 2024, 12:51 AM IST

ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠಕ್ಕೆ ಚಿಂತನೆ: ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ ಸುರಕ್ಷತೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಸ್ತೆ ಸುರಕ್ಷತೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಏರ್ಪಡಿಸಿದ್ದ ಭಾರತೀಯ ಆಟೋಮೊಬೈಲ್ ತಯಾರಕರ ಒಕ್ಕೂಟ (ಸೇಫ್) ವಾರ್ಷಿಕ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ವಾಹನ ಉದ್ಯಮವು ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಜಿಡಿಪಿಗೆ ವಾಹನ ಉದ್ಯಮ ಶೇ.6.5ರಷ್ಟು ಕೊಡುಗೆ ನೀಡುತ್ತಿದ್ದು, ಮೂರು ಕೋಟಿಗೂ ಹೆಚ್ಚಿನ ಜನರು ನೇರ ಮತ್ತು ಪರೋಕ್ಷ ಉದ್ಯೋಗವನ್ನು ಹೊಂದಿದ್ದಾರೆ. ಆದರೆ, ರಸ್ತೆ ಅಪಘಾತಗಳು ನಮಗೆ ಸವಾಲಾಗುತ್ತಿದ್ದು, ಅದರ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ರಾಜ್ಯದಲ್ಲಿ ರಸ್ತೆ ಅಪಘಾತಗಳ ಪ್ರಮಾಣ ಇಳಿಸಲು ಹೆದ್ದಾರಿ ಸೇರಿದಂತೆ ನಗರ ಮತ್ತು ಗ್ರಾಮೀಣ ರಸ್ತೆಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಅಪಘಾತ ಪೀಡಿತ ರಸ್ತೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಸಂಚಾರ ನಿಯಮ, ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ಪತ್ತೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಮಾರ್ಟ್‌ ವ್ಯವಸ್ಥೆ ಅಳವಡಿಸಿ ಅಪಘಾತದ ಪ್ರಮಾಣ ಕಡಿಮೆ ಮಾಡಲಾಗಿದೆ. ಅದನ್ನು ರಾಜ್ಯದ ಇತರ ಪ್ರಮುಖ ರಸ್ತೆಗಳಲ್ಲೂ ಅಳವಡಿಸಿ, ಪಾದಚಾರಿಗಳು, ಸೈಕಲ್ ಸವಾರರು ಸೇರಿದಂತೆ ಇನ್ನಿತರರು ಸುರಕ್ಷಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ರಸ್ತೆ ಅಪಘಾತ ತಡೆಯಲು ಹೆಚ್ಚಾಗಿ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕಿದೆ. ಜತೆಗೆ ವಾಹನ ಚಾಲಕರ ಮೇಲಿನ ಒತ್ತಡ ನಿವಾರಣೆಗೆ ಸೂಕ್ತ ಕ್ರಮಗಳು ಕೈಗೊಳ್ಳಬೇಕಿದೆ. ರಾಜ್ಯದಲ್ಲಿರುವ ಮೂರು ಕೋಟಿಗೂ ಹೆಚ್ಚಿನ ವಾಹನಗಳ ಪೈಕಿ ಬೆಂಗಳೂರಿನಲ್ಲಿಯೇ ಒಂದು ಕೋಟಿಗೂ ಹೆಚ್ಚಿನ ವಾಹನಗಳು ಸಂಚರಿಸುತ್ತಿವೆ. ವಾಹನಗಳ ಸಂಖ್ಯೆ ಹೆಚ್ಚಾದಂತೆ ಅಪಘಾತಗಳೂ ಹೆಚ್ಚುತ್ತಿವೆ. ಹೀಗಾಗಿ ಎಲ್ಲರೂ ಸಾರ್ವಜನಿಕ ಸಾರಿಗೆ ಬಳಕೆಯತ್ತ ಗಮನಹರಿಸಬೇಕು ಎಂದು ತಿಳಿಸಿದರು. ಸೇಫ್‌ ಅಧ್ಯಕ್ಷ ಸುಶಾಂತ್‌ ನಾಯ್ಕ್‌, ಎಸ್‌ಐಎಎಂನ ಕಾರ್ಯನಿರ್ವಾಹಕ ನಿರ್ದೇಶಕ ಪ್ರಶಾಂತ್‌ ಕೆ.ಬ್ಯಾನರ್ಜಿ ಇದ್ದರು.

ರಸ್ತೆ ಸುರಕ್ಷತೆ ಜತೆಗೆ ಪರಿಸರ ಸಂರಕ್ಷಣೆಗಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಮುಂದಿನ ದಿನಗಳಲ್ಲಿ ಐದು ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆ ಮಾಡುವ ಮೂಲಕ ಹಸಿರು ಸಾರಿಗೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗುವುದು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸಾರಿಗೆಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ರಾಮಲಿಂಗಾರೆಡ್ಡಿ. ಸಾರಿಗೆ ಸಚಿವ