ರಾಜ್ಯಾದ್ಯಂತ ಸೈಕಲ್‌ನಲ್ಲಿ ಸಂಚರಿಸಿ ಪಕ್ಷ ಸಂಘಟಿಸಿದ ಫಲವಾಗಿ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದಿತ್ತು. ದಕ್ಷಿಣ ಭಾರತದಲ್ಲಿ ಬಿಜೆಪಿ ಬೆಳೆಯಲು ಬಿಎಸ್‌ವೈ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿ:

ಬಿ.ಎಸ್‌. ಯಡಿಯೂರಪ್ಪ ಅವರು ರಾಜಕೀಯ ಕ್ಷೇತ್ರಕ್ಕೆ ಆಗಮಿಸಿ ಐದ ದಶಕಗಳಾದ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಬಿಎಸ್‌ವೈ ಅಭಿಮಾನೋತ್ಸವದಲ್ಲಿ ಹುಬ್ಬಳ್ಳಿಯ ಸಾವಿರಾರು ಜನ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ಅವರು, ಸಚಿವ ಅಮಿತ್‌ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು, 500ಕ್ಕೂ ಹೆಚ್ಚು ಮಠಾಧೀಶರು, ಪಕ್ಷಾತೀತವಾಗಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಈ ಕುರಿತು ಬುಧವಾರ ಜಿಲ್ಲಾ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದರು.

ರಾಜ್ಯಾದ್ಯಂತ ಸೈಕಲ್‌ನಲ್ಲಿ ಸಂಚರಿಸಿ ಪಕ್ಷ ಸಂಘಟಿಸಿದ ಫಲವಾಗಿ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದಿತ್ತು. ದಕ್ಷಿಣ ಭಾರತದಲ್ಲಿ ಬಿಜೆಪಿ ಬೆಳೆಯಲು ಬಿಎಸ್‌ವೈ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಬಿಎಸ್‌ವೈ ಮುಖ್ಯಮಂತ್ರಿಯಾಗಿದ್ದ ವೇಳೆ ರೈತರು, ಬಡವರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದವರಿಗೆ ಯೋಜನೆ ರೂಪಿಸಿ ಜನನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾಗಿದ್ದು, ಅವರೊಬ್ಬ ಪಕ್ಷಾತೀತ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದರು.

ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ವಿಪ ಸದಸ್ಯ ಪ್ರದೀಪ ಶೆಟ್ಟರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಲಿಂಗರಾಜ ಅಂಗಡಿ, ಜಯತೀರ್ಥ ಕಟ್ಟಿ, ರಾಜು ಕೋರ್ಯಾಣಮಠ ಸೇರಿದಂತೆ ಹಲವರಿದ್ದರು.