ಕನ್ನಡಪ್ರಭ ವಾರ್ತೆ ಬೈಲಹೊಂಗಲ ಚಿತ್ರದುರ್ಗದಲ್ಲಿ ಮೇ 9ರಂದು ಆಯೋಜಿಸಲಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಚಿತ್ರದುರ್ಗದಲ್ಲಿ ಮೇ 9ರಂದು ಆಯೋಜಿಸಲಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.

ನಗರದ ವಿದ್ಯಾನಗರದ ಗೃಹ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾರಂಭಕ್ಕೆ ಬೈಲಹೊಂಗಲ ಕ್ಷೇತ್ರದಿಂದಲೂ ಭಾರೀ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಕರೆದೊಯ್ಯಲು ಸಿದ್ಧತೆ ನಡೆದಿದೆ. ಈಗಾಗಲೇ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಮಾಲೋಚನಾ ಸಭೆಗಳನ್ನು ನಡೆಸಲಾಗಿದ್ದು, ಗ್ರಾಮ ಹಾಗೂ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಕಾರ್ಯಕ್ರಮಕ್ಕೆ ತೆರಳಲು ವಾಹನಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾವಿರಾರು ಜನರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದರು.ಬಿ.ಎಸ್‌.ಯಡಿಯೂರಪ್ಪ ಹೋರಾಟದ ರಾಜಕಾರಣದ ಮೂಲಕ ಸಾಮಾನ್ಯ ಕಾರ್ಯಕರ್ತನಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಬೆಳೆದ ನಾಯಕರು. ರೈತರು, ಕಾರ್ಮಿಕರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಅವರ ಆಡಳಿತಾವಧಿಯಲ್ಲಿ ನೀರಾವರಿ, ಗ್ರಾಮೀಣ ಅಭಿವೃದ್ಧಿ, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿತ್ತು ಎಂದು ಹೇಳಿದರು.

ಮೇ.9ರ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಈ ಸಮಾವೇಶ ರಾಜ್ಯ ರಾಜಕೀಯದಲ್ಲಿ ಹೊಸ ಉತ್ಸಾಹ ಮೂಡಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ, ಮುಖಂಡರಾದ ಮುರಗೇಶ ಗುಂಡ್ಲೂರ, ಆನಂದ ಮೂಗಿ, ಚಂದನ ಕೌಜಲಗಿ, ಬಸವರಾಜ ನೇಸರಗಿ, ವಿಶಾಲ ಬೋಗೂರ, ಶಿವಪ್ರಸಾದ ಪಾಟೀಲ, ಶಿವು ಶಿರಸಂಗಿ, ಅಶೋಕ ಗುಂಡ್ಲೂರ ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.