ಸಹಸ್ರಾರು ಜನರಿಂದ ಡಾ.ಎಸ್.ಎಲ್‌. ಭೈರಪ್ಪ ಅಂತಿಮ ದರ್ಶನ

| Published : Sep 26 2025, 01:00 AM IST

ಸಹಸ್ರಾರು ಜನರಿಂದ ಡಾ.ಎಸ್.ಎಲ್‌. ಭೈರಪ್ಪ ಅಂತಿಮ ದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಹೃದಯಾಘಾತದಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್‌.ಎಲ್‌. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಮೈಸೂರು ತಲುಪಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು.

ಕನ್ನಡಪ್ರಭ ವಾರ್ತೆ ಮೈಸೂರು

ಹೃದಯಾಘಾತದಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್‌.ಎಲ್‌. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಮೈಸೂರು ತಲುಪಿತು.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್‌. ಶ್ರೀವತ್ಸ, ಕೆ.ಹರೀಶ್‌ಗೌಡ, ವಿಧಾನ ಪರಿಷತ್‌ ಸದಸ್ಯರಾದ ಎಚ್‌. ವಿಶ್ವನಾಥ್‌, ಕೆ.ಶಿವಕುಮಾರ್, ಮಾಜಿ ಸಂಸದ ಪ್ರತಾಪ ಸಿಂಹ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯದರ್ಶಿ ಶಿವಕುಮಾರಸ್ವಾಮಿ, ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲಶಾಸ್ತ್ರಿ, ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ, ಇತಿಹಾಸ ತಜ್ಞ ಪ್ರೊ.ಪಿ.ವಿ. ನಂಜರಾಜೇ ಅರಸ್, ಮೈಸೂರು ವಿವಿ ಕುಲಪತಿ ಪ್ರೊ.ಎನ್‌.ಕೆ. ಲೋಕನಾಥ್‌, ವಿಶ್ರಾಂತ ಕುಲಪತಿ ಪ್ರೊ. ಪದ್ಮಾಶೇಖರ್, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಡಿಸಿಪಿ ಬಿಂದುಮಣಿ, ಕೆ.ಎಸ್. ಸುಂದರ ರಾಜ್, ನಾಟಕ ಅಕಾಡೆಮಿ ಮಾಜಿ ಸದಸ್ಯ ಬಿ.ಎಂ. ರಾಮಚಂದ್ರ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

ರಂಗಾಯಣ ಆವರಣ ಸೇರಿದಂತೆ ಕಿಂದರಿಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಜಮಾಯಿಸಿದ್ದರು.ಪಾರ್ಥಿವ ಶರೀರವಿದ್ದ ವಾಹನವು ಕಲಾಮಂದಿರ ಆವರಣ ಪ್ರವೇಶಿಸುತ್ತಿದ್ದಂತೆ ಅಭಿಮಾನಿಗಳು ಪುಷ್ಪವೃಷ್ಟಿಗರೆದು ಕಂಬನಿ ಮಿಡಿದರು. ಎಸ್.ಎಲ್. ಭೈರಪ್ಪ ಅವರ ನಿಧನದಿಂದಾಗಿ ಕಲಾಮಂದಿರ ಆವರಣದಲ್ಲಿ ನೀರವ ಮೌನ ಆವರಿಸಿತ್ತು.

ಕಲಾಮಂದಿರ ಆವರಣದಲ್ಲಿ ಅಂತಿಮ ದರ್ಶನಕ್ಕೆ ಆಗಮಿಸಿದವರಿಗೆ ನೆರಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಆವರಣದಲ್ಲಿ ಸಾರ್ವಜನಿಕರು ಹಾಗೂ ಗಣ್ಯರಿಗೆ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಉಸ್ತುವಾರಿ ವಹಿಸಿದ್ದರು.

ಪೊಲೀಸ್ ಬಿಗಿ ಭದ್ರತೆ:

ಜಯಲಕ್ಷ್ಮೀಪುರಂ ಪೊಲೀಸ್ ಠಾಣೆ ಇನ್‌ ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ 80 ಮಂದಿ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ ಗೆ ನಿಯೋಜಿಸಲಾಗಿತ್ತು. ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರಕ್ಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿದರು.

ಜೆಎಸ್ಎಸ್ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಪಾರ್ಥಿವ ಶರೀರವನ್ನು ಕಿಂದರಿಜೋಗಿ ಆವರಣದಿಂದ ಜೆಎಸ್ಎಸ್ ಆಸ್ಪತ್ರೆ ಚೈತ್ಯಗಾರಕ್ಕೆ ಸ್ಥಳಾಂತರಿಸಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಹೊರಟು ಮನೆಯಲ್ಲಿ ದರ್ಶನಕ್ಕೆ ಇರಿಸಿ ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ಆಗುವವರೆಗೂ ಅಂಬ್ಯೂಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ.

ಉಳಿದಂತೆ ರಂಗಕರ್ಮಿ ಎಚ್‌. ಜನಾರ್ಧನ್‌, ಮೈಸೂರು ಲಿಟರರಿ ಫೋರಂ ಸಂಸ್ಥಾಪಕಿ ಶುಭಾ ಸಂಜಯ್‌ ಅರಸ್‌, ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಡಿಎಚ್‌ಒ ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಮೊದಲಾದವರು ಅಂತಿಮ ದರ್ಶನ ಪಡೆದರು.

ಗುರುವಾರ ಬೆಳಗ್ಗೆಯಿಂದಲೇ ಮೈಸೂರು ನಗರ, ಮಂಡ್ಯ ಸೇರಿದಂತೆ ವಿವಿಧ ಭಾಗದಿಂದ ಸಾವಿರಾರು ಜನರು ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ಕಿಂದರಿಜೋಗಿ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತ ಜನರು ತಮ್ಮ ನೆಚ್ಚಿನ ಸಾಹಿತಿಯ ಅಂತಿಮ ದರ್ಶನ ಪಡೆದರು.

ಭೈರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಕಲಾಮಂದಿರದಲ್ಲಿ ಆಯೋಜಿಸಿದ್ದ ನಾಟಕದ ಸಮಯವನ್ನು ಬದಲಿಸಲಾಗಿತ್ತು.ಇಂದು ಅಂತ್ಯಕ್ರಿಯೆ

ಡಾ.ಎಸ್‌.ಎಲ್‌. ಭೈರಪ್ಪ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಕಲಾಮಂದಿರದ ಕಿಂದರಿಜೋಗಿ ಆವರಣದಲ್ಲಿ ಸಂಜೆ 6 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿತ್ತು.

ಬಳಿಕ ಪಾರ್ಥಿವ ಶರೀರವನ್ನು ನಗರದ ಜೆಎಸ್‌ಎಸ್ ಆಸ್ಪತ್ರೆಯ ಕೋಲ್ಡ್‌ ಸ್ಟೋರೇಜ್‌ ಗೆ ರವಾನಿಸಲಾಯಿತು. ಸೆ. 26 ರಂದು ಬೆಳಗ್ಗೆ 8.30ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆದು ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಡಳಿತ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ.