ಕನ್ನಡಪ್ರಭ ವಾರ್ತೆ ಬೆಳಗಾವಿ

ಬಹುಕೋಟಿ ವಂಚನೆ ಪ್ರಕರಣವನ್ನು ತೀವ್ರ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರ್‌ನನ್ನು ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕರೆತಂದಿದ್ದಾರೆ.

ಬೆಂಗಳೂರಿನಲ್ಲಿ ಹಲವು ದಿನಗಳ ಕಾಲ ವಿಚಾರಣೆ ನಡೆದಿದ್ದು, ಇದೀಗ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ಕರೆತಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿಸಿದ್ದಾರೆ. ನ್ಯಾಯಾಲಯ ನೀಡಿದ್ದ 10 ದಿನಗಳ ಸಿಐಡಿ ಕಸ್ಟಡಿ ಅವಧಿಯೂ ಮೇ 27ರಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿ ಮಂಗಳವಾರವೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿಐಡಿ ಸಿದ್ಧತೆ ನಡೆಸಿದ್ದರು.

ಪ್ರಕರಣದ ತನಿಖೆಯ ಭಾಗವಾಗಿ ಶಿವಾನಂದ ನೀಲಣ್ಣವರ್ ಪತ್ನಿ, ನಟ ಹಾಗೂ ಕರವೇ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಆರ್.ಅಭಿಲಾಷ್ ಮತ್ತು ವ್ಯವಹಾರ ಪಾಲುದಾರ ಸುಭಾಷ್ ಅವರಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಅದರಂತೆ ಮೂವರೂ ಮಂಗಳವಾರ ಮಾಳಮಾರುತಿ ಪೊಲೀಸ್ ಠಾಣೆಗೆ ಹಾಜರಾಗಿ ಸಿಐಡಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ವಿಚಾರಣೆ ವೇಳೆ ಹಣಕಾಸು ವ್ಯವಹಾರಗಳು, ಆಸ್ತಿ ಖರೀದಿ, ಬ್ಯಾಂಕ್ ಖಾತೆಗಳ ನಿರ್ವಹಣೆ, ಕಂಪನಿಯ ಆಡಳಿತ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾದ ಹಣದ ಮೂಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಡಿಕೆದಾರರ ಹಣದಿಂದ ಖರೀದಿಸಲಾಗಿದೆ ಎನ್ನಲಾದ ಐಷಾರಾಮಿ ವಾಹನಗಳ ಕುರಿತು ತನಿಖೆ ತೀವ್ರಗೊಂಡಿದೆ. ಡಿಫೆಂಡರ್, ಮರ್ಸಿಡಿಸ್ ಬೆಂಜ್‌ ಹಾಗೂ ವೆಲ್‌ಫೈರ್ ಸೇರಿದಂತೆ ದುಬಾರಿ ವಾಹನಗಳ ಖರೀದಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಅವುಗಳನ್ನು ಜಪ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗುತ್ತಿದೆ.


ಸಿಐಡಿ ಅಧಿಕಾರಿಗಳು ಈಗಾಗಲೇ ಶಿವಂ ಅಸೋಸಿಯೇಟ್ಸ್ ಕಚೇರಿಗಳಿಂದ ವಶಪಡಿಸಿಕೊಂಡಿರುವ ದಾಖಲೆಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು ಹಾಗೂ ಇತರೆ ಡಿಜಿಟಲ್ ಮಾಹಿತಿಯನ್ನು ಪರಿಶೀಲಿಸುತ್ತಿದ್ದು, ಹಣದ ಹರಿವು ಮತ್ತು ಹೂಡಿಕೆ ಜಾಲದ ಸಂಪೂರ್ಣ ಚಿತ್ರಣ ಪಡೆಯಲು ಪ್ರಯತ್ನಿಸುತ್ತಿದ್ದಾರೆ.