ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಬಿಜೆಪಿಯಿಂದ ಅಣ್ಣಾಸಾಹೇಬ ಶಂಕರ ಜೊಲ್ಲೆ ಒಂದೇ ದಿನ ಎರಡು ಬಾರಿ ನಾಮಪತ್ರ ಸಲ್ಲಿಸಿದರು. ಸರ್ವ ಜನತಾ ಪಾರ್ಟಿಯಿಂದ ಅಪ್ಪಾಸಾಹೇಬ ಶ್ರೀಪತಿ ಕುರಣೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ವಿಲಾಸ ದ್ಯಾಮಗೊಂಡ ಮಣ್ಣೂರ ಸೇರಿದಂತೆ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣಾಧಿಕಾರಿ ರಾಹುಲ್ ಶಿಂಧೆ ನಾಮಪತ್ರ ಸ್ವೀಕರಿಸಿದರು. ಕ್ಷೇತ್ರದಲ್ಲಿ ಇದುವರೆಗೆ ಒಟ್ಟು 7 ನಾಮಪತ್ರ ಸಲ್ಲಿಕೆಯಾಗಿವೆ.
ಬಳಿಕ ಮಾತನಾಡಿದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ, ಈಗಾಗಲೇ ನಾಲ್ಕು ವಿಧಾನಸಭೆ ಕ್ಷೇತ್ರದಲ್ಲಿ ಬೃಹತ್ ಸಭೆ ಮಾಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಲೋಕಸಭಾ ಕ್ಷೇತ್ರದ ಐದು ಜನ ಕಾಂಗ್ರೆಸ್ ಶಾಸಕರಿದ್ದರೂ, ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸಭೆ ಚುನಾವಣೆಯೇ ಬೇರೆ ಲೋಕಸಭೆ ಚುನಾವಣೆಯೇ ಬೇರೆ ಎಂದು ಹೇಳಿದರು.ಮಾಜಿ ಸಂಸದ ರಮೇಶ ಕತ್ತಿ ಮುನಿಸಿನ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲವೊಂದು ಕೆಲಸದಲ್ಲಿದ್ದಾರೆ. ಅವರು ಸಹ ಪ್ರಚಾರಕ್ಕೆ ಬರುತ್ತಾರೆ ಎಂದ ಅವರು, ಕೋವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ನಾನು, ನಮ್ಮ ಸಂಸ್ಥೆಯ ಸದಸ್ಯರು, ಶಾಸಕರು ಒಳ್ಳೆಯ ರೀತಿಯಾಗಿ ಕೆಲಸ ಮಾಡಿದ್ದೇವೆ. ಈ ಬಾರಿ ಜನರ ಬೆಂಬಲ ನೋಡಿದರೆ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕೋಡಿ ಲೋಕಸಭೆ ಚುನಾವಣೆ ಪ್ರಭಾರಿ ಪಿ.ಎಚ್. ಪೂಜಾರ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವನಾಯಕರಾಗಿ ಹೊರಹೊಮ್ಮಿದ್ದಾರೆ. ಮತ್ತೊಮ್ಮೆ ಪ್ರಧಾನಿ ಆಗೋದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಣ್ಣಾಸಾಹೇಬ ಜೊಲ್ಲೆಯವರು ಮಾಡಿದ ಅಭಿವೃದ್ಧಿ ಕಾರ್ಯಗಳು, ತಮ್ಮ ಸಂಸ್ಥೆಯ ಮೂಲಕ ಜನರಿಗೆ ಉದ್ಯೋಗ ಕಲ್ಪಿಸಿರುವುದು ಇವೆಲ್ಲ ಕಾರ್ಯಗಳನ್ನು ಜನರು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅಣ್ಣಾಸಾಹೇಬ ಜೊಲ್ಲೆ ಗೆಲುವು ನಿಶ್ಚಿತ ಎಂದು ಹೇಳಿದರು..ಈ ಸಂದರ್ಭದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಶ್ರೀಮಂತ ಪಾಟೀಲ, ಕಲ್ಲಪ್ಪ ಮಗೆನ್ನವರ, ಮಹೇಶ ಕುಮಟಳ್ಳಿ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಡಾ.ರಾಜೇಶ ನೇರ್ಲಿ, ಶಿವಾನಂದ ನವಲಿಹಾಳ, ಅಮೃತ ಕುಲಕರ್ಣಿ, ಅಪ್ಪಾಸಾಹೇಬ ಚೌಗಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))