ಸಾರಾಂಶ
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಡೂರ, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚು ಲೀಡ್ ಸಾಧಿಸಿದೆ. ಇದೀಗ ಉಪಚುನಾವಣೆಯಲ್ಲಿ ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ.
ಧಾರವಾಡ:
ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಮಂಗಳವಾರ ಹೈಕಮಾಂಡ್‌ನಿಂದ ಅಂತಿಮ ತೀರ್ಮಾನ ಬರಲಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಹೇಳಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ಹಂಚಿಕ ಬಗ್ಗೆ ಮುಖ್ಯಮಂತ್ರಿಗಳು ಕರೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಸಚಿವರು ಚರ್ಚೆ ನಡೆಸಿದ್ದಾರೆ. ತಮ್ಮ ಅಭಿಪ್ರಾಯ ಕೂಡ ಹೇಳಿದ್ದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿ ಸಭಾ ನಿರ್ಣಯ ಪಕ್ಷದ ವರಿಷ್ಠರಿಗೆ ಸಲ್ಲಿಸಿದೆ. ಇದನ್ನು ಆಧರಿಸಿ ಸೋಮವಾರ ಅಥವಾ ಮಂಗಳವಾರ ಯಾರಿಗೆ ಟಿಕೆಟ್ ನೀಡಬೇಕು ಎಂಬ ಕುರಿತಂತೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದ ಕುರಿತು ಈಗಾಗಲೇ ನನ್ನ ಅಭಿಪ್ರಾಯ ಹೇಳಿದ್ದೇನೆ. ಆದರೆ, ಕೊನೆಯದಾಗಿ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದ ಸಚಿವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ. ಯೋಗೇಶ್ವರ ಅವರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರ ಪಕ್ಷದ ರಾಜ್ಯಾಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿಗಳ ಜವಾಬ್ದಾರಿ ಇದೆ. ಅಲ್ಲದೇ, ಆ ಭಾಗದ ಬಗ್ಗೆ ನನಗೆ ಮಾಹಿತಿಯೂ ಇಲ್ಲ ಎಂದು ಲಾಡ್ ಪ್ರಶ್ನೆಗೆ ಉತ್ತರಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಡೂರ, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚು ಲೀಡ್ ಸಾಧಿಸಿದೆ. ಇದೀಗ ಉಪಚುನಾವಣೆಯಲ್ಲಿ ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವುದಾಗಿ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.