ಸಾತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೧,೪೫೦ ಕುಟುಂಬಗಳು ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದರೂ ಸೂಕ್ತ ಆಸ್ತಿ ದಾಖಲೆಗಳಿಲ್ಲದೆ ತೊಂದರೆ ಅನುಭವಿಸುತ್ತಿವೆ. ೭೦ರಿಂದ ೮೦ ವರ್ಷಗಳಿಂದ ವಾಸವಿರುವ ಅರ್ಹ ಕುಟುಂಬಗಳು ದಾಖಲೆಗಳಿಲ್ಲ ಎಂಬ ಕಾರಣಕ್ಕೆ ಆತಂಕಪಡುವ ಅಗತ್ಯವಿಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಪ್ರಮುಖ ಜವಾಬ್ದಾರಿ. ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಯನ್ನೂ ಗಂಭೀರವಾಗಿ ಪರಿಗಣಿಸಿ, ಅರ್ಹರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಪಿ. ರವಿಕುಮಾರ್ ತಿಳಿಸಿದರು.

ಶನಿವಾರ ತಾಲೂಕಿನ ಸಾತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾತನೂರು ಗ್ರಾಮದ ಶಂಕರ ಮಠ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪ್ರಜಾ ಸೇವೆ ಆಂದೋಲನ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು. ಇಲಾಖೆಗಳ ಅಧಿಕಾರಿಗಳೇ ಗ್ರಾಮಗಳಿಗೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳನ್ನು ಪರಿಶೀಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಬೇಕು. ನ್ಯಾಯಾಲಯದ ವ್ಯಾಪ್ತಿಗೆ ಬರುವ ಪ್ರಕರಣಗಳನ್ನು ಹೊರತುಪಡಿಸಿ, ಉಳಿದ ಅರ್ಜಿಗಳನ್ನು ಅಧಿಕಾರಿಗಳ ಹಂತದಲ್ಲಿಯೇ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಸೂಚಿಸಲಾಗಿದೆ ಎಂದರು.

೧,೪೫೦ ಕುಟುಂಬಗಳಿಗೆ ಆಸ್ತಿ ದಾಖಲೆ:

ಸಾತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೧,೪೫೦ ಕುಟುಂಬಗಳು ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದರೂ ಸೂಕ್ತ ಆಸ್ತಿ ದಾಖಲೆಗಳಿಲ್ಲದೆ ತೊಂದರೆ ಅನುಭವಿಸುತ್ತಿವೆ. ೭೦ರಿಂದ ೮೦ ವರ್ಷಗಳಿಂದ ವಾಸವಿರುವ ಅರ್ಹ ಕುಟುಂಬಗಳು ದಾಖಲೆಗಳಿಲ್ಲ ಎಂಬ ಕಾರಣಕ್ಕೆ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಇಂತಹ ಕುಟುಂಬಗಳಿಗೆ ಆಸ್ತಿ ದಾಖಲೆ ಒದಗಿಸಲು ವಿಶೇಷ ಅವಕಾಶ ಕಲ್ಪಿಸಿದೆ. ಫಲಾನುಭವಿಗಳು ವಿದ್ಯುತ್ ಬಿಲ್ ಹಾಗೂ ಗ್ರಾಮ ಪಂಚಾಯಿತಿಯ ಅಸೆಸ್ಮೆಂಟ್ ದಾಖಲೆಗಳನ್ನು ಸಲ್ಲಿಸಿದರೆ, ಅವುಗಳನ್ನು ಪರಿಶೀಲಿಸಿ ನಿಯಮಾನುಸಾರ ಆಸ್ತಿ ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಡಿ.೨೭ರೊಳಗೆ ಎಲ್ಲಾ ೧,೪೫೦ ಕುಟುಂಬಗಳಿಗೂ ಆಸ್ತಿ ದಾಖಲೆ ವಿತರಿಸುವ ಗುರಿ ಹೊಂದಲಾಗಿದೆ. ಅಧಿಕಾರಿಗಳು ಈ ಕಾರ್ಯವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಐಪಿಜಿಆರ್‌ಎಸ್ ಮೂಲಕ ಅರ್ಜಿಗಳ ವಿಲೇವಾರಿ: ವಿಶ್ವನಾಥ್

ತಹಸೀಲ್ದಾರ್ ವಿಶ್ವನಾಥ್ ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಅಧಿಕಾರಿಗಳೇ ಗ್ರಾಮಗಳಿಗೆ ಭೇಟಿ ನೀಡಿ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಹೆಚ್ಚಿಸಲು ಐಪಿಜಿಆರ್‌ಎಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ದಾಖಲಿಸಿ, ಅವುಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಅರ್ಜಿ ಯಾವ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ, ಯಾವ ಅಧಿಕಾರಿಯ ಹಂತದಲ್ಲಿ ಬಾಕಿಯಿದೆ ಹಾಗೂ ನಿಗದಿತ ಕಾಲಮಿತಿಯೊಳಗೆ ವಿಲೇವಾರಿಯಾಗಿದೆಯೇ ಎಂಬುದನ್ನು ಪೋರ್ಟಲ್ ಮೂಲಕ ತಿಳಿದುಕೊಳ್ಳಬಹುದು ಎಂದು ಹೇಳಿದರು.

ಈ ವ್ಯವಸ್ಥೆಯಿಂದ ಅರ್ಜಿಗಳ ವಿಲೇವಾರಿಯಲ್ಲಿನ ವಿಳಂಬಕ್ಕೆ ಕಡಿವಾಣ ಹಾಕುವುದರ ಜೊತೆಗೆ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಲಿದೆ. ಜನಪ್ರತಿನಿಧಿಗಳಿಗೂ ಅರ್ಜಿಗಳ ಪ್ರಗತಿಯ ಮಾಹಿತಿ ಲಭ್ಯವಾಗುವುದರಿಂದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಭಾ ಹಾಗೂ ಮಂಡ್ಯ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.