ಗದಗ: ಫೆ. 14ರಂದು ಹಾವೇರಿಯಲ್ಲಿ ಜರುಗುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಫಲಾನುಭವಿಗಳಿಗೆ 1,06,000 ಹಕ್ಕುಪತ್ರಗಳನ್ನು ಸಮರ್ಪಣೆ ಮಾಡಲಾಗುತ್ತಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 6500 ಕಂದಾಯ ಗ್ರಾಮಗಳ ಘೋಷಣೆಯು ಗುರಿಯು ಹೊಂದಿದ್ದು, 2,20,000 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಬಡಜನರಿಗೆ ಭೂ ಗ್ಯಾರಂಟಿ ಕೊಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.ರಾಜ್ಯ ಸರ್ಕಾರವು ಬಡಜನರ ಹಾಗೂ ಸಾಮಾನ್ಯ ಜನರ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸಾವಿರ ದಿನಗಳ ಸಾರ್ಥಕ ಸೇವೆಯನ್ನು ಜನರಿಗೆ ಸಮರ್ಪಿಸುವುದೇ ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದರು.
ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜನ ಸಾಮಾನ್ಯರ ಕೆಲಸ ಬಡವರ ಕೆಲಸ, ಜನಸೇವೆಯೇ ಜನಾರ್ದನ ಸೇವೆ ಎಂದು ತಿಳಿದುಕೊಂಡು ಕಂದಾಯ ಇಲಾಖೆಯ ಅಧಿಕಾರಿಗಳೇ ಮನೆ ಮನೆ ಬಾಗಿಲಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಮನೆಗಳಿಗೆ ಹಕ್ಕುಪತ್ರ ಇಲ್ಲದೇ ಬದುಕು ಅತಂತ್ರದಿಂದ ಕೂಡಿದ ಜನರಿಗೆ ಶಾಶ್ವತ ಪರಿಹಾರ ಕೊಡಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡಿದೆ ಎಂದರು.ಈ ವೇಳೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.ಅಧಿಕಾರ ಚರ್ಚೆಗಿಂತ ಜನಸೇವೆಯೇ ಮುಖ್ಯ: ಸಚಿವ ಕೃಷ್ಣ ಬೈರೇಗೌಡ
ಗದಗ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಅಥವಾ ಅಧಿಕಾರಕ್ಕಾಗಿ ನಡೆಯುವ ಚರ್ಚೆಗಳಿಗೆ ಗಮನ ಕೊಡುವಷ್ಟು ಸಮಯ ನಮಗಿಲ್ಲ. ನಮ್ಮ ಮೊದಲ ಆದ್ಯತೆ ಅಭಿವೃದ್ಧಿ ಕೆಲಸ ಮತ್ತು ಜನಸೇವೆಯಷ್ಟೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಸಿಎಂ ಕುರ್ಚಿ ಕದನದ ಕುರಿತಾದ ಚರ್ಚೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದರು.ಕೆಲವು ಶಾಸಕರು ಮತ್ತು ಸಚಿವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರಬಹುದು. ಆದರೆ, ನಮಗೆ ಕೆಲಸ ಮಾಡಲು ಸಮಯ ಸಾಕಾಗುತ್ತಿಲ್ಲ. ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಂಡರೆ ಸಾರ್ವಜನಿಕರ ಹಿತ ಕಾಯುವ ಶೇಕಡಾ 1ರಷ್ಟು ಕೆಲಸವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಕಾಲ ಕಾಲಕ್ಕೆ ಏನು ಬದಲಾವಣೆ ಆಗಬೇಕೋ ಅದು ಆಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ಸಿಎಂ ಕುರ್ಚಿ ಬಗ್ಗೆ ಚರ್ಚೆ ಮಾಡುವುದರಿಂದ ಮಾಧ್ಯಮಗಳಿಗೆ ಟಿಆರ್‌ಪಿ ಹೆಚ್ಚಾಗಬಹುದು. ಆದರೆ ಇದರಿಂದ ಜನರ ಹೊಟ್ಟೆ ತುಂಬುವುದಿಲ್ಲ ಅಥವಾ ಅವರ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ನನ್ನ ಮನಸ್ಸಿನಲ್ಲಿ ಏನಿದೆ ಎಂಬುದನ್ನು ನಾನು ನಾಲ್ಕು ಗೋಡೆಗಳ ಮಧ್ಯೆ ಹೇಳುತ್ತೇನೆಯೇ ಹೊರತು ಬಹಿರಂಗವಾಗಿ ಮಾತನಾಡಿ ಆಸೆ ತೀರಿಸಿಕೊಳ್ಳುವುದಿಲ್ಲ. ರಾಷ್ಟ್ರೀಯ ಅಧ್ಯಕ್ಷರ ಸೂಚನೆಯನ್ನು ಪಾಲಿಸುವುದು ನನ್ನ ಕರ್ತವ್ಯ ಎಂದರು.ಮಾಜಿ ಸಚಿವ ಬೈರತಿ ಬಸವರಾಜ್ ಅವರ ಬಂಧನ ಕುರಿತು ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಯಾವುದೇ ರಾಜಕೀಯ ಅಡಗಿಲ್ಲ. ಈ ಪ್ರಕರಣವು ಸಿವಿಲ್ ಕೋರ್ಟ್, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಹಂತದಲ್ಲಿ ಚರ್ಚೆಯಾಗಿ ತೀರ್ಮಾನವಾಗಿದೆ. ನ್ಯಾಯಾಲಯದ ಆದೇಶದಂತೆ ಕಾನೂನು ಕ್ರಮ ಜರುಗುತ್ತಿದೆ ಅಷ್ಟೇ ಎಂದರು.