ಸಾರಾಂಶ
ಅರಸೀಕೆರೆ : ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಪಂಚ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ತಲುಪಿಸಲು ನಮ್ಮೊಟ್ಟಿಗೆ ಅಧಿಕಾರಿಗಳು ಕೈಜೋಡಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಶೇಖರ್ ಅಧಿಕಾರಿಗಳಿಗೆ ಕರೆ ನೀಡಿದರು.

ತಮ್ಮ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೊದಲ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಯಾವ ಪ್ರಮಾಣದಲ್ಲಿ ಅನುಷ್ಠಾನಗೊಂಡಿದೆ ಎಂದು ಇಲಾಖೆವಾರು ಮಾಹಿತಿ ಪಡೆದುಕೊಂಡು ಮಾತನಾಡಿ, ಪಂಚ ಯೋಜನೆ ವ್ಯಾಪ್ತಿಯಲ್ಲಿ ಬರುವ ಯಾವ ಒಬ್ಬ ಫಲಾನುಭವಿಗೂ ಈ ಯೋಜನೆಯಿಂದ ವಂಚಿತವಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ನಮ್ಮೊಟ್ಟಿಗೆ ಸಮರ್ಪಕವಾಗಿ ಕೈಜೋಡಿಸಿ ಕಾರ್ಯಗತಗೊಳಿಸದೆ ಹೋದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ಸಹ ನೀಡಿದರು.ಶಾಸಕ ಶಿವಲಿಂಗೇಗೌಡರ ಮಾರ್ಗದರ್ಶನದಲ್ಲಿ ಹೋಬಳಿವಾರು ಸಭೆಗಳನ್ನು ನಡೆಸಿ ಪಂಚ ಯೋಜನೆಗಳ ಪ್ರಯೋಜನವನ್ನು ಪಡೆಯದ ಫಲಾನುಭವಿಗಳ ಸಮಸ್ಯೆ ಆಲಿಸುವ ಜೊತೆಗೆ ಸಭೆಯಲ್ಲಿ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ನೂತನ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸತೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಜಾಜುರು ಸಿದ್ದೇಶ್, ಗೊಲ್ಲರಹಳ್ಳಿ ಪ್ರದೀಪ್, ಮೂತಿಕೆರೆ ಪರಮೇಶ್, ನರಸೀಪುರ ವಿರೂಪಾಕ್ಷ, ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಹಾರ ಇಲಾಖೆ ಸಾರಿಗೆ ಇಲಾಖೆ ಹಾಗೂ ಸೆಸ್ಕಾಂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.