ಕನ್ನಡಪ್ರಭ ವಾರ್ತೆ ಅರಸೀಕೆರೆ

ಕ್ಷೇತ್ರದ ಅಭಿವೃದ್ಧಿಯನ್ನು ಅರಿಯಬೇಕೆಂದರೆ ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಪ್ರಗತಿಯನ್ನು ಗಮನಿಸಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.ನಗರದ ಹೆಂಜಗೊಂಡನಹಳ್ಳಿ ಬಡಾವಣೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ನಿಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಜಿಲ್ಲೆಗಳಿಂದ ನಗರಕ್ಕೆ ಬಂದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವ ಉದ್ದೇಶದಿಂದ ಸುಮಾರು 100 ವಿದ್ಯಾರ್ಥಿನಿಯರು ವಾಸಿಸುವಂತ ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ನಿಲಯವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ನೂರಾರು ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಇತ್ತೀಚೆಗೆ ತರಕಾರಿ ವ್ಯಾಪಾರಿಗಳು ತಮ್ಮ ಬಳಿ ಬಂದು ಮಂಗಳೂರು ಹಾಗೂ ಬಾಂಬೆ ವ್ಯಾಪಾರಿಗಳು ಹೆಚ್ಚು ಲಾಭ ಮಾಡಿಕೊಳ್ಳುತ್ತಿರುವ ಬಗ್ಗೆ ಮನವಿ ಸಲ್ಲಿಸಿದ್ದನ್ನು ಉಲ್ಲೇಖಿಸಿ, ನಗರದಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ 10 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಇದರಿಂದ ರೈತರು ಹಾಗೂ ವ್ಯಾಪಾರಿಗಳಿಗೆ ಬಹಳ ಪ್ರಯೋಜನವಾಗಲಿದೆ ಎಂದು ತಿಳಿಸಿದರು.ತಾಲೂಕಿನ ಅಭಿವೃದ್ಧಿ ಕುರಿತು ಪ್ರಶ್ನಿಸುವವರಿಗೆ ಉತ್ತರಿಸಿದ ಅವರು, ಈ ಹಿಂದೆ 300-400 ಕೋಟಿ ಅನುದಾನ ತಂದು ತಾಲೂಕು ಅಭಿವೃದ್ಧಿ ಮಾಡಿದಂತೆ ಮುಂದಿನ ದಿನಗಳಲ್ಲಿ 200-300 ಕೋಟಿ ಅನುದಾನವನ್ನು ತಂದು ಸಮಗ್ರ ಅಭಿವೃದ್ಧಿ ಸಾಧಿಸಲಾಗುವುದು ಎಂದು ಹೇಳಿದರು. ಕೆಲ ಬಡ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ನಂತರ ಶಿಕ್ಷಣವನ್ನು ನಿಲ್ಲಿಸುತ್ತಿರುವುದನ್ನು ಗಮನಿಸಿ, ಕೊಡಿಮಠದಲ್ಲಿರುವ ಮುರಾರ್ಜಿ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪಿ.ಯು ತರಗತಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.ವಸತಿ ನಿಲಯ ನಿರ್ಮಾಣದ ಕುರಿತು ಮಾತನಾಡಿದ ಅವರು, ಸಬ್‌ಸ್ಟಿಕ್ ಟ್ಯಾಂಕ್ ಅನ್ನು ಪ್ರತ್ಯೇಕವಾಗಿ ನಿರ್ಮಿಸಿ, ಯಾವುದೇ ರೀತಿಯ ತೊಂದರೆ ಆಗದಂತೆ ಕಟ್ಟಡ ನಿರ್ಮಾಣ ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಾಮಗಾರಿಯನ್ನು ಸ್ವತಃ ಭೇಟಿ ನೀಡಿ ಪರಿಶೀಲಿಸುವುದಾಗಿ ಹಾಗೂ ಯಾವುದೇ ತಪ್ಪು ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅರಸೀಕೆರೆ ಹಿಂದುಳಿದಿದೆ ಎನ್ನುವವರಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲೆಯಲ್ಲಿ ಪರ್ ಕ್ಯಾಪಿಟಾ ಆದಾಯದಲ್ಲಿ ಅರಸೀಕೆರೆ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು. ಜನರ ಆಶೀರ್ವಾದದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ನಾನು, ಕ್ಷೇತ್ರದ ಅಗತ್ಯಗಳನ್ನು ಅರಿತು ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದರು.ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್‌ ಸಂತೋಷ್ ಕುಮಾರ್‌, ಸಮಾಜ ಕಲ್ಯಾಣ ಇಲಾಖೆಯ ಪರಶಿವಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.