ಸಾರಾಂಶ
ತಂಬಾಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ವಿಷಕಾರಿ ರಸಾಯನಿಕ ವಸ್ತುಗಳಿವೆ. ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ. ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ತಂಬಾಕು ಅಪಾಯಕಾರಿ ಉತ್ಪನ್ನವಾಗಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 60 ದಿನಗಳ ಕಾಲ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಶಿಲ್ಪ ಉದ್ಘಾಟಿಸಿದರು.ನಂತರ ಅವರು ಮಾತನಾಡಿ, ಸಾರ್ವಜನಿಕರ ಆರೋಗ್ಯದ ಮೇಲೆ ದೊಡ್ಡ ಮಾರಕವಾಗಿ ಪರಿಣಮಿಸುತ್ತಿರುವಲ್ಲಿ ತಂಬಾಕು ಸೇವನೆಯು ಒಂದಾಗಿದೆ. ಆದ್ದರಿಂದ ಯುವಜನತೆ ಹಾಗೂ ವಿದ್ಯಾರ್ಥಿಗಳ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ಪೋಸ್ಕೋ ಕಾಯ್ದೆ, ಮಾನವ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಆರೋಗ್ಯಕ್ಕೆ ಅಪಾಯಕಾರಿ ಕಂಬಾಕು
ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ರಾಜಾ ಇಮಾಮ್ ಖಾಸಿಂ ಮಾತನಾಡಿ, ತಂಬಾಕು ಸೇವನೆಯಿಂದ ಭಾರತದ ಎಲ್ಲ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ದೊಡ್ಡ ಅಪಾಯವಾಗಿದೆ. ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ಇದು ಅಪಾಯಕಾರಿ ಅಂಶವಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಮಹೇಶ್ ಕುಮಾರ್ ಮಾತನಾಡಿ, ತಂಬಾಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ವಿಷಕಾರಿ ರಸಾಯನಿಕ ವಸ್ತುಗಳಿವೆ. ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಂ.ಎಸ್. ಕೃಷ್ಣಪ್ರಸಾದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಲ್. ಮುನಿರಾಜು, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.