ಇಂದು ಡಾ. ಉಮೇಶ ಜಾಧವ್‌ ನಾಮಪತ್ರ ಸಲ್ಲಿಕೆ

| Published : Apr 18 2024, 02:20 AM IST

ಸಾರಾಂಶ

ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ್‌ ಏ.18ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ್‌ ಏ.18ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆ ದಿನದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಕರೆ ನೀಡಿದ್ದಾರೆ.

ಅಂದು ಗಂಜ್‌ ಪ್ರದೇಶದಲ್ಲಿರುವ ನಗರೇಶ್ವರ ಶಾಲಾ ಆವರಣದಿಂದ ಬೆ.10ಗಂಟೆಗೆ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಪ್ರಾರಂಭವಾಗಲಿದೆ. ನಗರೇಶ್ವರ ಶಾಲೆಯಿಂದ ಸೂಪರ್ ಮಾರ್ಕೆಟ್, ಜಗತ್ ವೃತ್ತ ದಾರಿಯಾಗಿ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಯಾಗಲಿದೆ. ನಾಮಪತ್ರ ಸಲ್ಲಿಸುವ ಬೃಹತ್ ಮೆರವಣಿಗೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಹಾಗೂ ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಜೊತೆಗೆ ಜಿಲ್ಲೆಯ ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಇವರೊಂದಿಗೆ ಸಾಥ್ ನೀಡಲಿದ್ದಾರೆ.

ಮೆರವಣಿಗೆಯಲ್ಲಿ ಸಾಂಸ್ಕೃತಿಕ ತಂಡಗಳು ಭಾಗವಹಿಸಲಿದ್ದು ಅತ್ಯಂತ ಆಕರ್ಷಕವಾದ ಭವ್ಯ ಮೆರವಣಿಗೆಯಲ್ಲಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಮಪತ್ರ ಸಲ್ಲಿಕೆಯ ವಿಶೇಷ ಮೆರವಣಿಗೆಯನ್ನು ಯಶಸ್ಸಿಗೊಳಿಸಬೇಕು ಎಂದು ಕೋರಿದ್ದಾರೆ.

ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸುವ ಮತ್ತು ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಕಮಲವನ್ನು ಅರಳಿಸಿ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಕಳುಹಿಸುವ ಮಹತ್ವದ ಚುನಾವಣೆ ಯಾಗಿರುವುದರಿಂದ ನಾಮಪತ್ರ ಸಲ್ಲಿಕೆಯ ದಿನ ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾರ್ಯಕರ್ತರಲ್ಲಿ ಡಾ. ಜಾಧವ್‌ ಮನವಿ ಮಾಡಿದ್ದಾರೆ.