ಸಾರಾಂಶ
ನಕಲು ಮುಕ್ತ ಪಾರದರ್ಶಕ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಡಿಸಿ ಸುಶೀಲಾ ಸೂಚನೆಕನ್ನಡಪ್ರಭ ವಾರ್ತೆ ಯಾದಗಿರಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಡಿ.29 ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ''''ಎ'''' ಮತ್ತು ''''ಬಿ'''' ಗುಂಪಿನ 384 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಜಿಲ್ಲೆಯಲ್ಲಿ ನಕಲು ಮುಕ್ತ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಯಾದಗಿರಿ ನಗರದ 15 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, 4,561 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.ಪರೀಕ್ಷೆ ಸುಲಿತವಾಗಿ ನಡೆಯುವಂತೆ 15 ಕೇಂದ್ರಗಳಿಗೆ ಮೇಲ್ವಚಾರಕರು, ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು ಹಾಗೂ ವೀಕ್ಷಕರನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ಸರಿಯಾದ ಸಮಯಕ್ಕೆ ಕೇಂದ್ರಕ್ಕೆ ತಲುಪುವಂತೆ ಮತ್ತು ಅಭ್ಯರ್ಥಿಗಳಿಗೆ ವಿತರಣೆಯಾಗುವಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಪರೀಕ್ಷೆ ಮುನ್ನ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ಗೋಡೆ ಗಡಿಯಾರ, ಗಾಳಿ ಬೆಳಕಿನ ವ್ಯವಸ್ಥೆ ಸೇರಿದಂತೆ ಆಯೋಗದ ಮಾರ್ಗಸೂಚಿ ಅನ್ವಯ ಸಕಲ ಮೂಲಸೌಕರ್ಯ ಕಲ್ಪಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಿಸಿ ಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಬೇಕೆಂದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಅಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ಎಲ್ಲ ಜೆರಾಕ್ಸ್ ಅಂಗಡಿ, ಪುಸ್ತಕ ಮಳಿಗೆ ಬಂದ್ ಮಾಡಲು ಆದೇಶಿಸಿದೆ ಎಂದು ತಿಳಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಡಿಡಿಪಿಐ ಚೆನ್ನಬಸಪ್ಪ ಮುಧೋಳ, ಜಿಲ್ಲಾ ಖಜಾನೆ ಅಧಿಕಾರಿ ಮಾಳಿಂಗರಾಯ, ಸಿಪಿಐ ಶ್ರೀದೇವಿ, ನೋಡಲ್ ಅಧಿಕಾರಿ ಬಸವನಗೌಡ ಆಲ್ದಾಳ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.